ADVERTISEMENT

ಸಾಲಮನ್ನಾ ಮಾಡಿ, ಇಲ್ಲವೇ ಖುರ್ಚಿ ಖಾಲಿ ಮಾಡಿ

ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2018, 16:52 IST
Last Updated 27 ಜೂನ್ 2018, 16:52 IST
ಶಂಕರಗೌಡ ಪಾಟೀಲ್
ಶಂಕರಗೌಡ ಪಾಟೀಲ್   

ಯಾದಗಿರಿ: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನರಿಗೆ ಚುನಾವಣೆಯಲ್ಲಿ ಆಶ್ವಾಸನೆ ನೀಡಿದಂತೆ ರಾಜ್ಯದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಇಲ್ಲವೇ ಕುರ್ಚಿ ಖಾಲಿ ಮಾಡಬೇಕು’ ಎಂದು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ್ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ರೈತರ ಸಹಕಾರಿ ಮತ್ತು ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿನ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ, ಅಧಿಕಾರದ ಗುದ್ದುಗೆ ಏರಿದ ಮೇಲೆ ಸಾಲಮನ್ನಾ ವಿಚಾರದಲ್ಲಿ ಸಿಎಂ ಮೀನಮೇಷ ಎಣಿಸುತ್ತಾ ವಚನ ಭ್ರಷ್ಟರಾಗಿದ್ದಾರೆ’ ಎಂದರು.

‘ರಾಜ್ಯದ ರೈತರ ಸಾಲಮನ್ನಾ ಮಾಡಲು ನೆರವು ನೀಡುವಂತೆ ಸಿಎಂ ಕೇಂದ್ರಕ್ಕೆ ಮನವಿ ಮಾಡಿಲ್ಲ. ಸಹಕಾರಿ ಬ್ಯಾಂಕುಗಳಲ್ಲಿನ ಸಾಲಮನ್ನಾ ಮಾಡಲು ಸಹಕರಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯದಲ್ಲಿ ₹53 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳುತ್ತಿದ್ದಾರೆ. ಆದರೆ, ನಿಜವಾಗಿಯೂ ರಾಜ್ಯದಲ್ಲಿ ₹120 ಸಾವಿರ ಕೋಟಿ ರೈತರ ಸಾಲ ಇದೆ. ಅದನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.

‘ಸಾಲಮನ್ನಾ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಬಿಜೆಪಿ ರೈತ ಮೋರ್ಚಾದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ಆಗಲೂ ಸರ್ಕಾರ ಸಾಲಮನ್ನಾ ವಿಷಯ ಕುರಿತು ಗಂಭೀರ ಚಿಂತನೆ ನಡೆಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ’ ಎಂದು ಎಚ್ಚರಿಸಿದರು.

‘ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ತಿಂಗಳಾದರೂ ಖಾತೆ ಕಿತ್ತಾಟದಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಸರ್ಕಾರ ಖಾತೆ ಹಂಚಿಕೆ ಗೊಂದಲ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆಗೆ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಸವರಾಜ ಇಂಗಿನ, ಗುರುಲಿಂಗನಗೌಡ, ರಾಜ್ಯ ಉಪಾಧ್ಯಕ್ಷೆ ನಾಗರತ್ನಾ ಅನಪುರ, ಜಿಲ್ಲಾ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ರೈತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಶರಣಗೌಡ ಯಡ್ಡಳ್ಳಿ ಹಾಜರಿದ್ದರು.

ಜನರನ್ನು ಸುಳ್ಳಿನ ಮೂಲಕ ವಂಚಿಸಬಹುದು ಎಂದು ಸಿಎಂ ಅಂದುಕೊಂಡಿದ್ದಾರೆ. ಇದೇ ರೀತಿ ಸಾಲಮನ್ನಾ ವಿಳಂಬತವಾದರೆ ರೈತರು ಸಿಎಂ ತಕ್ಕ ಪಾಠ ಕಲಿಸಲಿದ್ದಾರೆ.
ಶಂಕರಗೌಡ ಪಾಟೀಲ್,ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.