ವಡಗೇರಾ: ‘ರೈತರು ಸಕಾಲದಲ್ಲಿ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ರೋಗರುಜಿನಗಳಿಂದ ರಕ್ಷಿಸಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಸವರಾಜ. ಜಿ. ಪಾಟೀಲ ಹೇಳಿದರು.
ತಾಲ್ಲೂಕಿನ ಕಂದಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
6 ತಿಂಗಳು ಮೇಲ್ಪಟ್ಟ ಜಾನುವಾರುಗಳಿಗೆ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೋಗ ಬಾಧೆಗಳು ಬಾರದಂತೆ ಇಲಾಖೆ ವತಿಯಿಂದ ತಾಲ್ಲೂಕಿನಾದ್ಯಂತ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈತರು ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಸಮಯಕ್ಕೆ ಸರಿಯಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ಜಾನುವಾರುಗಳು ಆರೋಗ್ಯದಿಂದ ಇರಲು ಸಾಧ್ಯ. ಇಲಾಖೆಯ ಸಿಬ್ಬಂದಿ ಈಗಾಗಲೇ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದು ರೈತ ಬಾಂಧವರು ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಶು ಇಲಾಖೆಯ ಸಿಬ್ಬಂದಿಗಳಾದ ಡಾ. ಪ್ರಿಯಾಂಕ ರೆಡ್ಡಿ, ನಾಗರಾಜ, ಮೈಬೂಬಸಾಬ, ಹಸನ, ರಜಾಕ, ಸಿದ್ದಾರೂಢ, ಹನುಮಂತ, ರಫೀಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.