ADVERTISEMENT

ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿ ಪಾಲಿಸಲು ಸಚಿವ ಪ್ರಭು ಚವಾಣ್ ಮನವಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 5:14 IST
Last Updated 18 ಏಪ್ರಿಲ್ 2021, 5:14 IST
ಪ್ರಭು ಚವಾಣ‌್
ಪ್ರಭು ಚವಾಣ‌್   

ಯಾದಗಿರಿ: ಕೋವಿಡ್ ಎರಡನೇ ಅಲೆಯ ಪರಿಣಾಮ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಸೋಂಕು ಹತ್ತಿರಕ್ಕೆ ಸುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಪ್ರವಾಸ ಮಾಡುವುದನ್ನು ಆದಷ್ಟು ತಗ್ಗಿಸಬೇಕು. ಮದುವೆ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಬೇಕು. ಹಾಗೆಯೇ ಸೋಂಕು ನಿಯಂತ್ರಿಸಲು ವೈದ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ರೋಗಿಗಳು ಚಿಕಿತ್ಸೆ ನೀಡುವ ವೈದ್ಯರಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಆರೋಗ್ಯಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ADVERTISEMENT

45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆದು ಲಸಿಕೆಯ ಗುರಿ ಶೇ 100ರಷ್ಟು ಪೂರ್ಣಗೊಳಿಸಬೇಕು. ಕೋವಿಡ್ ಪಾಸಿಟಿವ್ ಪ್ರಕರಣಗಳ ನಿಯಂತ್ರಣ ಹಾಗೂ ಮಾರ್ಗಸೂಚಿಗಳ ಅನುಷ್ಠಾನ ಪಾಲನೆಗೆ ಇನ್ನಷ್ಟು ಬಿಗಿ ಕ್ರಮ ಜರುಗಿಸುವಂತೆ ಜಿಲ್ಲಾಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.