ADVERTISEMENT

ಚುನಾವಣೆ ಸವಾಲಾಗಿ ಸ್ವೀಕರಿಸಿ: ಪ್ರಚಾರ ಸಭೆಯಲ್ಲಿ ಕಾರ್ಯಕರ್ತರಿಗೆ ಮುದ್ನಾಳ ಕರೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 8:44 IST
Last Updated 28 ನವೆಂಬರ್ 2021, 8:44 IST
ಯಾದಗಿರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಆಯೋಜಿಸಿದ್ದ ವಿಧಾನ ಪರಿಷತ್‌ (ಸ್ಥಳೀಯ ಸಂಸ್ಥೆ) ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ವೆಂಕಟರಡ್ಡಿ ಮುದ್ನಾಳ ಉದ್ಘಾಟಿಸಿದರು. ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಅಭ್ಯರ್ಥಿ ಬಿ.ಜಿ.ಪಾಟೀಲ ಇದ್ದರು
ಯಾದಗಿರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಆಯೋಜಿಸಿದ್ದ ವಿಧಾನ ಪರಿಷತ್‌ (ಸ್ಥಳೀಯ ಸಂಸ್ಥೆ) ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ವೆಂಕಟರಡ್ಡಿ ಮುದ್ನಾಳ ಉದ್ಘಾಟಿಸಿದರು. ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಅಭ್ಯರ್ಥಿ ಬಿ.ಜಿ.ಪಾಟೀಲ ಇದ್ದರು   

ಯಾದಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಧಾನ ಪರಿಷತ್‌ನಲ್ಲಿ ಈ ಭಾಗದ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತುವ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಅವರನ್ನು ಪುನರಾಯ್ಕೆ ಮಾಡುವ ಅಗತ್ಯವಿದೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಕಾರ್ಯಕರ್ತರಿಗೆ ಕರೆ ನೀಡಿದರು.

ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಆಯೋಜಿಸಿದ್ದ ವಿಧಾನ ಪರಿಷತ್‌ (ಸ್ಥಳೀಯ ಸಂಸ್ಥೆ) ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.

ಬಿ.ಜಿ.ಪಾಟೀಲರು ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ವಿಧಾನ ಪರಿಷತ್ ಅನುದಾನ ಹಂಚಿಕೆ ಮಾಡುವಾಗ ಎಷ್ಟೋ ಸಂದರ್ಭದಲ್ಲಿ ಪಾಟೀಲ ಅವರು ನನ್ನಿಂದ ಮಾಹಿತಿ ಪಡೆದು ಅಗತ್ಯವಿರುವ ಕಾರ್ಯಗಳಿಗೆ ನೀಡಿದ್ದಾರೆ ಎಂದರು.

ADVERTISEMENT

ಮಾಜಿ ಶಾಸಕವೀರಬಸವಂತರಡ್ಡಿ ಮುದ್ನಾಳ ಮಾತನಾಡಿ, ಬಿ.ಜಿ.ಪಾಟೀಲ ಅತ್ಯಂತ ಸರಳ ವ್ಯಕ್ತಿಯಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಮತದಾರರು ಅವರಿಗೆ ಆಶೀರ್ವದಿಸಬೇಕಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿಯ ವೇಗ ಹೆಚ್ಚಾಗಲಿದೆ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ, ಪಕ್ಷ ಪಾಟೀಲ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ಕಳೆದ ಆರು ವರ್ಷಗಳಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಅವರು ಸರ್ಕಾರದೊಡನೆ ನಿರಂತರ ಸಂಪರ್ಕದಲ್ಲಿದ್ದರು. ಪಕ್ಷದ ಕಾರ್ಯಕರ್ತರು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

ಅಭ್ಯರ್ಥಿ ಬಿ.ಜಿ.ಪಾಟೀಲ ಮಾತನಾಡಿ,ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಕಡಿಮೆ ಇರುವುದರಿಂದ ವಿಧಾನಸಭೆಯಲ್ಲಿ ಮಂಡಿಸಿದ ಕಾಯ್ದೆಗಳು ಪಾಸ್ ಮಾಡಲು ಆಗುತ್ತಿಲ್ಲ. ಆದ್ದರಿಂದ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೇಲ್ಮನೆಯಲ್ಲಿ ನಮ್ಮ ಬಲ ಹೆಚ್ಚಿಸುವ ಅಗತ್ಯವಿದೆ. ನಾನು ಸದಾ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ ಎಂದರು.

ವಿಧಾನ ಪರಿಷತ್‌ ಸದಸ್ಯರಿಗೆ ಸರ್ಕಾರ ವಾರ್ಷಿಕ ₹2 ಕೋಟಿ ಅನುದಾನ ನೀಡುತ್ತದೆ. ಇದರಲ್ಲಿ ಕ್ಷೇತ್ರದ ಎಲ್ಲ ಶಾಸಕರ ಗಮನಕ್ಕೆ ತಂದು ಹಂಚಿಕೆ ಮಾಡಿದ್ದೇನೆ ಎಂದರು.

ಕ್ರೇಡಾಲ್ ಅಧ್ಯಕ್ಷ ಚಂದು ಬಿ.ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಚನ್ನಾರಡ್ಡಿ ಬಿಳ್ಹಾರ, ದೇವಿಂದ್ರನಾಥ ನಾದ್, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.