
ಯಾದಗಿರಿ: ‘ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆ- 1 ಅನ್ನು ನಕಲು ಮುಕ್ತವಾಗಿ ನಡೆಸಲು ವ್ಯವಸ್ಥಿತವಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಚೆಗೆ ಪಿಯು ಪರೀಕ್ಷೆ ಕುರಿತು ಪೂರ್ವಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
‘ಫೆಬ್ರುವರಿ 28ರಿಂದ ಮಾರ್ಚ್ 17ರವರೆಗೆ ಜಿಲ್ಲೆಯ 20 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಶಹಾಪುರ ತಾಲೂಕಿನಲ್ಲಿ ಐದು, ಸುರಪುರ ತಾಲೂಕಿನಲ್ಲಿ ನಾಲ್ಕು, ಯಾದಗಿರಿ ತಾಲೂಕಿನಲ್ಲಿ ಏಳು, ಗುರುಮಠಕಲ್ ತಾಲ್ಲೂಕಿನಲ್ಲಿ 2, ಕೆಂಭಾವಿ ಹಾಗೂ ಹುಣಸಗಿಯಲ್ಲಿ ತಲಾ 1 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಒಟ್ಟು 11,760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ ಮೂಲಕ ಕಾಲೇಜುಗಳಿಗೆ ವಿತರಿಸಲಾಗಿದೆ. ಈ ಪರೀಕ್ಷೆ ಕೇಂದ್ರಗಳಿಗೆ 105 ಪಿಯು ಕಾಲೇಜುಗಳ ವಿದ್ಯಾರ್ಥಿಗಳನ್ನು ಜೋಡಿಸಲಾಗಿದೆ’ ಎಂದರು.
‘ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರ ಸಂಪೂರ್ಣ ಜವಾಬ್ದಾರಿ ಇದ್ದು, ಯಾವುದೇ ಲೋಪ ಆಗದಂತೆ ಪರೀಕ್ಷೆ ನಡೆಸಬೇಕು. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಬೇಕು. ಪರೀಕ್ಷಾಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ ಮಾಡಕೊಳ್ಳಬೇಕು. ನಕಲು ಅಥವಾ ಸಾಮೂಹಿಕ ನಕಲು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ವಿಚಾರಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಇಂತಹ ವದಂತಿ ಹರಡಿಸುವವರ ವಿರುದ್ಧವೂ ಕ್ರಮವಾಗಲಿದೆ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಭದ್ರತೆಗೆ ಹೆಚ್ಚಿನ ಜಾಗೃತಿವಹಿಸಬೇಕು’ ಎಂದು ಸೂಚಿಸಿದರು.
‘ಪ್ರತಿ ಕೇಂದ್ರವು ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲಾ ಕೇಂದ್ರದಿಂದ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷೆ ಮೇಲ್ವಿಚಾರಣೆ ಮಾಡಲಾಗುವುದು. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ನಿಷೇಧಿಸಲಾಗಿದೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರೊಂದಿಗೆ ಮುಂಚಿತವಾಗಿ ಸಭೆ ಮಾಡಿ ಪರೀಕ್ಷೆ ನಡೆಸಬೇಕು’ ಎಂದರು.
‘ಸುಸೂತ್ರ ಪರೀಕ್ಷೆಗೆ ಪೊಲೀಸ್, ಖಜಾನೆ ಇತರೆ ಇಲಾಖೆಗಳು ಸಹಕರಿಸಬೇಕು. ಪರೀಕ್ಷೆ ಕೇಂದ್ರಗಳ ಹೊರಗೆ ಜನಸಂದಣಿಯಾಗಬಾದರು. ಯಾವುದೇ ರೀತಿಯ ದೂರುಗಳಿಗೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ತಿಳಿಸಬೇಕು. ಪರೀಕ್ಷೆ ಕೇಂದ್ರಗಳ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸರಿಯಾಗಿರಬೇಕು’ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಡಿಡಿಪಿಯು ಪಂಡಿತರಾವ್ ಪವಾರ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.