ADVERTISEMENT

ಕೃಷಿ ಉತ್ಪನ್ನ ಮಾರಾಟ, ಸಾಗಾಣಿಕೆಗೆ ಸಂಪೂರ್ಣ ಅನುಮತಿ: ಕೃಷಿ ಸಚಿವ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 16:20 IST
Last Updated 8 ಏಪ್ರಿಲ್ 2020, 16:20 IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು. ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಪಂ ಸಿಇಒ ಶಿಲ್ಪಾ ಶರ್ಮಾ ಇದ್ದರು
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು. ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಪಂ ಸಿಇಒ ಶಿಲ್ಪಾ ಶರ್ಮಾ ಇದ್ದರು   

ಯಾದಗಿರಿ: ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಕೃಷಿಗೆ ಪೂರಕವಾದ ಯಂತ್ರಗಳು, ಬೀಜ, ಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗೆ ಸಂಪೂರ್ಣ ಅನುಮತಿ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸ್ಪಷ್ಟಪಡಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯದಲ್ಲಿ ಕೋವಿಡ್-19 ಆವರಿಸಿರುವ ಕಾರಣ ಕೃಷಿ ಚಟುವಟಿಕೆ ಸುಗಮವಾಗಿ ನಡೆಯಲು ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಜಿಲ್ಲೆಯ ರೈತರು ಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಿಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷಿ ಪರಿಕರಗಳನ್ನು ರಾಜ್ಯದ ಎಲ್ಲಾ ಚೆಕ್‍ಪೋಸ್ಟ್‌ಗಳಲ್ಲಿ ಮುಕ್ತವಾಗಿ ಸಾಗಾಣಿಕೆ ಮಾಡಲು ಅನುಮತಿ ನೀಡುವಂತೆ ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ಕೊಡಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ತೊಂದರೆ ನೀಡುವಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ADVERTISEMENT

ಮುಂಗಾರು ಬಿತ್ತನೆಗಾಗಿ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಸರ್ಕಾರ ಸನ್ನದ್ಧವಾಗಿದೆ. ಜಿಲ್ಲೆಯ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ ಸಚಿವರು, ಎಪಿಎಂಸಿ ಎಂದಿನಂತೆ ಕಾರ್ಯನಿರ್ವಹಿಸಬೇಕು. ಹಮಾಲರಿಗೆ ಪಾಸ್ ವಿತರಿಸಬೇಕು. ಇನ್ನು ತರಕಾರಿ, ಹಣ್ಣು-ಹಂಪಲುಗಳಿಗೆ ಮಾರುಕಟ್ಟೆ ಒದಗಿಸಲು ತೋಟಗಾರಿಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ರಾಜ್ಯಕ್ಕೆ ₹957 ಕೋಟಿ ಬಿಡುಗಡೆ ಮಾಡಿದ್ದಾರೆ. ಇದರಿಂದ 49 ಲಕ್ಷಕ್ಕೂ ಹೆಚ್ಚು ರೈತರಿಗೆ ಇದರಿಂದ ಅನುಕೂಲವಾಗಿದೆ. ಅದರಂತೆ ಮುಖ್ಯಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ರಾಜ್ಯ ಸರ್ಕಾರದಿಂದ ₹600 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗೆ ₹2000 ನಂತೆ ಜಮಾ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಜಿಲ್ಲೆಗೆ ರಸಗೊಬ್ಬರವನ್ನು ರೈಲ್ವೆ ಮೂಲಕ ಸಮರ್ಪಕವಾಗಿ ತರಿಸಿಕೊಳ್ಳಲು ರೈಲ್ವೆ ರೇಕ್ ಪಾಯಿಂಟ್ ಒದಗಿಸುವಂತೆ ಕೋರಿದರೆ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ರೈತರಿಗೂ ಸಬ್ಸಿಡಿ ದರದಲ್ಲಿ ಭತ್ತದ ಬೀಜ ವಿತರಿಸಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಅವರು ಜಿಲ್ಲೆಗೆ ಹಾಪ್‍ಕಾಮ್ಸ್ ಮಳಿಗೆ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಕೋವಿಡ್-19 ತಡೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರೆ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಕೃಷಿ ಇಲಾಖೆ ಸಿದ್ಧತೆಗಳ ಮಾಹಿತಿ ನೀಡಿದರು.

ಜಿ.‍ಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಹಾಗೂ ರೈತ ಮುಖಂಡರು ಹಾಜರಿದ್ದರು.

***

ರೈತರು ಕೃಷಿ ಚಟುವಟಿಕೆ ಕೈಗೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಲ್ಲದೇ, ಸರ್ಕಾರ ಸೂಚಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
-ಬಿ.ಸಿ.ಪಾಟೀಲ, ಕೃಷಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.