ADVERTISEMENT

ಮುಡಬೂಳ, ಗುರುಮಠಕಲ್, ಯರಗೋಳ ಗ್ರಾಮಗಳ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಿ

ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 3:08 IST
Last Updated 20 ಮಾರ್ಚ್ 2021, 3:08 IST
ಯಾದಗಿರಿ ಜಿಲ್ಲಾ ಕೋವಿಡ್-19 ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಎಸ್‌ಪಿ ಋಷಿಕೇಶ ಭಾಗವನ್ ಸೋನವಣೆ ಇದ್ದರು
ಯಾದಗಿರಿ ಜಿಲ್ಲಾ ಕೋವಿಡ್-19 ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಎಸ್‌ಪಿ ಋಷಿಕೇಶ ಭಾಗವನ್ ಸೋನವಣೆ ಇದ್ದರು   

ಯಾದಗಿರಿ: ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕೋವಿಡ್-19 ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ತಡೆಗಟ್ಟುವುದು ಮತ್ತು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಸರ್ಕಾರ ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ADVERTISEMENT

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುತ್ತಿರುವುದು ತಿಳಿದು ಬಂದಿದೆ. ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್‌ಟಿಪಿಸಿಆರ್‌ ಪರೀಕ್ಷೆ ನೆಗೆಟಿವ್ ವರದಿಯೊಂದಿಗೆ ಆಗಮಿಸತಕ್ಕದ್ದು ಎಂದು ತಿಳಿಸಿದರು.

ಮಾರ್ಚ್‌ 1 ರಿಂದ 15 ರವರೆಗೆ ಕೇವಲ 20 ಸಕ್ರಿಯ ಪ್ರಕರಣಗಳು ಮಾತ್ರ ಕಂಡುಬಂದಿದ್ದು, ಕಳೆದ 5 ದಿನಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದ ಶಹಾಪುರ ತಾಲ್ಲೂಕಿನ ಮುಡಬೂಳ, ಗುರುಮಠಕಲ್, ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮಗಳಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ತೋರಿಸಬೇಕು ಎಂದು ತಿಳಿಸಿದರು.

ಮಹಾರಾಷ್ಟ್ರ ರಾಜ್ಯದಿಂದ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್‌ಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು.

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್‌ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್ ಸ್ಯಾನಿಟೈಸರ್‌ ಅನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಇಂದುಮತಿ ಕಾಮಶೆಟ್ಟಿ, ಡಾ.ಅನ್ವರ್, ಡಾ.ಲಕ್ಷ್ಮಿಕಾಂತ್ ಇದ್ದರು.

***

ನೆಗೆಟಿವ್ ವರದಿ ಇಲ್ಲದೆ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್‌ಟಿಪಿಸಿಆರ್‌ ನೆಗೆಟಿವ್ ಫಲಿತಾಂಶ ಬರುವರೆಗೂ ಅಂಥವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಕೊಠಡಿಯಲ್ಲಿ ಇರಿಸಬೇಕು

- ಡಾ.ರಾಗಪ್ರಿಯಾ ಆರ್.,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.