ಕೆಂಭಾವಿ: ಸುರಪುರ ಬಸ್ ಘಟಕದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಬುಧವಾರ ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಕಿರದಳ್ಳಿ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣಕ್ಕೆ ಹಲವು ಗ್ರಾಮಗಳಿಂದ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು, ಸಮಯಕ್ಕೆ ಬಸ್ ಬಾರದಿರುವುದರಿಂದ ತೊಂದರೆಯಾಗುತ್ತಿದೆ. ಈ ಕುರಿತು ಕಳೆದ ವಾರ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳ ನಿರ್ಲಕ್ಷಕ್ಕೆ ಮತ್ತೆ ಪ್ರತಿಭಟನೆ ನಡೆಸಿದರು.
‘ಅಧಿಕಾರಿಗಳ ಸಮಜಾಯಿಸಿ ಉತ್ತರದಿಂದ ನಾವೆಲ್ಲ ರೋಸಿ ಹೋಗಿದ್ದೇವೆ. ಹಿಂದೆ ಪ್ರತಿಭಟಿಸಿದಾಗ ನೀಡಿದ ಭರವಸೆ ನೀಡದರು. ಆದರೂ ಸರಿಯಾದ ಸಮಯಕ್ಕೆ ಬಸ್‌ಗಳು ಬಾರದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ತಡೆನಡೆಸಿ ಪ್ರತಿಭಟನೆ ಮಾಡಿದ್ದರಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.
ಪ್ರತಿಭಟನೆ ಸುದ್ದಿ ತಿಳಿದ ಸ್ಥಳಕ್ಕಾಗಮಿಸಿದ ಸಂಚಾರ ನಿಯಂತ್ರಕ ಮಾನಪ್ಪ ಮಾಳಳ್ಳಿಕರ್ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲೆ ಸರಿಯಾದ ಸಮಯಕ್ಕೆ ಬಸ್ ಓಡಾಟ ನಡೆಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.