
ಯಾದಗಿರಿ: ತಾಲ್ಲೂಕಿನ ಕಡೇಚೂರು– ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕಂಪೆನಿಗಳಲ್ಲಿ ಸ್ಥಳೀಯರಿಗೆ ಕೆಲಸಕ್ಕೆ ತೆಗೆದುಕೊಳ್ಳದೆ ಹೊರ ಜಿಲ್ಲೆ ಮತ್ತು ಅನ್ಯ ರಾಜ್ಯಗಳ ಕಾರ್ಮಿಕರಿಗೆ ಕೆಲಸ ಕೊಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂತ್ರಸ್ತರು, ಮುಖಂಡರು ಪ್ರತಿಭಟನೆ ನಡೆಸಿದರು.
‘ಕೈಗಾರಿಕಾ ಪ್ರದೇಶದಲ್ಲಿ ಕೆಲ ಕಂಪೆನಿಗಳು ಆರಂಭವಾಗಿವೆ. ಅವುಗಳಲ್ಲಿ ಈ ಭಾಗದ ಬಡವರು, ಕೂಲಿ ಕಾರ್ಮಿಕರಿಗೆ ಕೆಲಸ ಕೊಟ್ಟರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ನೌಕರಿ ಕೊಡದೆ ಅನ್ಯಾಯ ಮಾಡುತ್ತಿರುವುದನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಸೈದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆಂಜನೇಯ ಕಟ್ಟಿಮನಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮರಾಯ ಠಾಣಗುಂದಿ, ಮುಖಂಡರಾದ ಹಣಮಂತ ದೊಡ್ಡಮನಿ, ತಿಮ್ಮಣ್ಣ ಬೆಳಗುಂದಿ, ವೀರೇಶ ಸಜ್ಜನ್, ಪ್ರಭುಲಿಂಗ ಗೊಂದೆಡಿಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.