ADVERTISEMENT

ಯಾದಗಿರಿ: ಜಿಲ್ಲಾದ್ಯಂತ ಪಲ್ಸ್ ಪೋಲಿಯೊ ಅಭಿಯಾನ

5 ವರ್ಷದೊಳಗಿನ 1,61,662 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಗುರಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 15:24 IST
Last Updated 31 ಜನವರಿ 2021, 15:24 IST
ಯಾದಗಿರಿಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು
ಯಾದಗಿರಿಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು   

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಭಾನುವಾರ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಹಾಕಲಾಯಿತು. ಚಿಕ್ಕಮಕ್ಕಳಿಗೆ ಪೋಲಿಯೊ ಹಾಕಿಸುವ ಮೂಲಕ ಮಕ್ಕಳಿಗೆ ಯಾವುದೇ ಅಂಗವೈಕಲ್ಯ ಬಾರದಂತೆ ತಡೆಗಟ್ಟಬಹುದು ಎಂದು ಗಣ್ಯರು ಅಭಿಪ್ರಾಯಪಟ್ಟರು.

ನಗರದ ಸ್ಟೇಷನ್ ಬಜಾರ್‌ ಸರ್ಕಾರಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಶಾಸಕ ವೆಂಕಟರೆಡ್ಡಿ ಮುದ್ನಾಳಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಐದು ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವಂತೆ ಕರೆ ನೀಡಿದರು.

ADVERTISEMENT

ರಾಜ್ಯದಲ್ಲಿ ಪೋಲಿಯೊ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಮಾತನಾಡಿ, ದೇಶವು ಈಗಾಗಲೇ ಪೋಲಿಯೊ ಮುಕ್ತ ರಾಷ್ಟ್ರವಾಗಿದೆ. ಪ್ರಸ್ತುತ ಯಾವುದೇ ರೀತಿಯ ಪೋಲಿಯೊ ಪ್ರಕರಣಗಳು ವರದಿಯಾಗಿಲ್ಲ. ಭವಿಷ್ಯದಲ್ಲೂ ಈ ಪ್ರಕರಣಗಳು ಬೆಳಕಿಗೆ ಬರಬಾರದು ಎಂಬ ಉದ್ದೇಶದಿಂದ ಲಸಿಕೆ ನೀಡಲಾಗುತ್ತಿದ್ದು, ಪೋಷಕರು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವುದರಿಂದ ಮಕ್ಕಳಲ್ಲಿ ಅಂಗವೈಕಲ್ಯ ತಪ್ಪಿಸಬಹುದು. ಹಾಗಾಗಿ ಜಿಲ್ಲೆಯಾದ್ಯಂತ 3 ದಿನಗಳ ಕಾಲ ನಡೆಯುವ ಲಸಿಕೆ ಅಭಿಯಾನದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಬಂದಾಗ ತಪ್ಪದೇ ಪೋಲಿಯೊ ಹನಿ ಹಾಕಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದರು.

ಜಿಲ್ಲೆಯಲ್ಲಿ 5 ವರ್ಷದೊಳಗಿನ 1,61,662 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತಿದೆ. ಅದಕ್ಕಾಗಿ 653 ಲಸಿಕಾ ಕೇಂದ್ರ ತೆರೆಯಲಾಗಿದೆ. ಜೊತೆಗೆ 12 ಮೊಬೈಲ್ ತಂಡ, 41 ಟ್ರಾನ್ಸಿಟ್ ಬೂತ್‍ಗಳಲ್ಲಿ ಪೋಲಿಯೊ ಲಸಿಕೆ ಹಾಕಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ. ಹಬೀಬ್ ಸಾಬ್, ನಂದಣ್ಣ ಪಾಟೀಲ ಇದ್ದರು.

ಮಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ:

ತಾಲ್ಲೂಕಿನ ಮಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಬೆಳಗುಂದ ಗ್ರಾಮದಲ್ಲಿಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಮುದಾಯ ಆರೋಗ್ಯ ಅಧಿಕಾರಿ ಪ್ರಕೃತಿ ಹೆರೂರು ಮಾತನಾಡಿದರು.

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಾದ ಮಲ್ಲಮ್ಮ, ರಾಜೇಶ್ವರಿ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.