ADVERTISEMENT

ರಸ್ತೆ ಅಪಘಾತ; ವರ್ಷದಲ್ಲಿ 12 ಸಾವಿರ ಜನರ ಸಾವು– ಮರಿಯಪ್ಪ

ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ: ನ್ಯಾ. ಮರಿಯಪ್ಪ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 6:33 IST
Last Updated 2 ಜನವರಿ 2026, 6:33 IST
ಯಾದಗಿರಿಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಅವರು ಚಾಲನೆ ನೀಡಿದರು 
ಯಾದಗಿರಿಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಅವರು ಚಾಲನೆ ನೀಡಿದರು    

ಯಾದಗಿರಿ: ‘ರಾಜ್ಯದಲ್ಲಿ ಪ್ರತಿವರ್ಷ ಸುಮಾರು 12 ಸಾವಿರ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದು, ಕೈ, ಕಾಲಿನಂತಹ ದೇಹದ ಅಂಗಾಂಗಳನ್ನು ಕಳೆದುಕೊಳ್ಳುವವರು ಅಸಂಖ್ಯಾತರು ಇದ್ದಾರೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಕಳವಳ ವ್ಯಕ್ತಪಡಿಸಿದರು.

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ಗುರುವಾರ ಸಾರಿಗೆ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಆಯೋಜಿಸಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಅತಿ ವೇಗವಾಗಿ, ನಿರ್ಲಕ್ಷ್ಯದಿಂದ ಹಾಗೂ ಮೊಬೈಲ್ ಬಳಸಿ ವಾಹನಗಳನ್ನು ಚಾಲನೆ ಮಾಡುವವರು, ಹೆಲ್ಮೆಟ್ ಧರಿಸದೆ ಬೈಕ್ ಓಡಿಸುವವರು ಹೆಚ್ಚಾಗಿದ್ದಾರೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ’ ಎಂದರು.

ADVERTISEMENT

‘18 ವರ್ಷಕ್ಕಿಂತ ಕಡಿಮೆ ವಯಸ್ಸಿನವರೂ ವಾಹನ ಚಲಾಯಿಸಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾದೆ. ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಅಮೂಲ್ಯವಾದ ಜೀವ ಉಳಿಸಬೇಕಿದೆ’ ಎಂದು ಹೇಳಿದರು.

‘ವಾಹನಗಳ ಸವಾರರು ತಮಗೂ ಕುಟುಂಬವಿದೆ. ತಂದೆ, ತಾಯಿ, ಹೆಂಡತಿ ಮತ್ತು ಮಕ್ಕಳಿದ್ದಾರೆ ಎಂಬುದನ್ನು ಸ್ಮರಣೆಯಲ್ಲಿ ಇರಬೇಕು. ಕುಟುಂಬ ಸದಸ್ಯರು ಹೊರಗೆ ಹೋದ ನಮ್ಮವರು ಸುರಕ್ಷಿತವಾಗಿ ಮರಳಿ ಬರಲಿ ಎಂದು ಹಂಬಲಿಸುತ್ತಾರೆ. ಕುಟುಂಬದ ಆಧಾರಸ್ತಂಭವಾಗಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬ ಅನಾಥವಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲೀಂದ್ ಕುಮಾರ್ ಮಾತನಾಡಿ, ‘ಸಂಚಾರಿ ನಿಮಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು’ ಎಂದು ಕೋರಿದರು.

ಸಾರಿಗೆ ಇಲಾಖೆ ಅಧೀಕ್ಷಕರಾದ ಮೌನೇಶ, ಆನಂದ, ಸಿಬ್ಬಂದಿ ಶಿವಕುಮಾರ ನವಲೆ, ಅವಿನಾಶ್, ಆನಂದ, ವಿವಿಧ ಇಲಾಖೆಗಳ ಅಧಿಕಾರಿಗಳು, ಡ್ರೈವಿಂಗ್ ಸ್ಕೂಲ್ ಸಂಘದ ಅಧ್ಯಕ್ಷ ಯಲ್ಲಪ್ಪ ದೊಡ್ಮನಿ, ಜುಬೇರ್ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.