ADVERTISEMENT

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಲಿ

ಪಿಯು ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:39 IST
Last Updated 2 ಡಿಸೆಂಬರ್ 2022, 5:39 IST
ಯಾದಗಿರಿಯ ನ್ಯೂಕನ್ನಡ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಪ್ರಭಾರ ಡಿಡಿಪಿಯು ರುದ್ರಗೌಡ ಪಾಟೀಲ ಉದ್ಘಾಟಿಸಿದರು
ಯಾದಗಿರಿಯ ನ್ಯೂಕನ್ನಡ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಪ್ರಭಾರ ಡಿಡಿಪಿಯು ರುದ್ರಗೌಡ ಪಾಟೀಲ ಉದ್ಘಾಟಿಸಿದರು   

ಯಾದಗಿರಿ: ‘ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಹಾಗೂ ಕಠಿಣ ಪರಿಶ್ರಮವಿದ್ದರೆ ಎಂತಹ ಸಮಸ್ಯೆ ಇದ್ದರೂ ಸಲೀಸಾಗಿ ಪರಿಹಾರವಾಗಲಿದೆ’ ಎಂದು ಪ್ರಭಾರ ಡಿಡಿಪಿಯು ರುದ್ರಗೌಡ ಪಾಟೀಲ ಸಲಹೆ ನೀಡಿದರು.

ನಗರದ ನ್ಯೂಕನ್ನಡ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಇಟ್ಟುಕೊಂಡ ಗುರಿ ಸಾಧನೆಗೆ ನಿರಂತರ ಪ್ರಯತ್ನಶೀಲತೆ ಮೈಗೂಡಿಸಿಕೊಳ್ಳಬೇಕು. ನಿಮ್ಮ ಪಾಲಕರು ಸಾಕಷ್ಟು ಕನಸು ಹೊತ್ತುಕೊಂಡು ಸಾವಿರಾರು ರೂಪಾಯಿ ಖರ್ಚು ಮಾಡಿ ಉನ್ನತ ಶಿಕ್ಷಣ ಕೊಡಿಸುತ್ತಿದ್ದಾರೆ. ಅವರ ಕನಸು ನನಸಾಗಿಸಲು ಮುಂದಾಗಬೇಕು ಎಂದರು.

ADVERTISEMENT

ಕಾಲೇಜಿನ ಪ್ರಾಚಾರ್ಯ ಪ್ರೊ.ವೆಂಕಟರಾವ್ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮುಂದುವರಿಯಬೇಕು ಎಂಬ ದೃಷ್ಟಿಯಿಂದ ಇಲಾಖೆ ಪ್ರತಿವರ್ಷ ಸ್ಪರ್ಧೆಗಳನ್ನು ಆಯೋಜನೆ ಮಾಡುತ್ತಿದೆ. ಹಲವು ಸ್ಪರ್ಧೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತಿದ್ದಾರೆ ಎಂದು ಹೇಳಿದರು.

ಪತ್ರಕರ್ತ ಲಕ್ಷ್ಮೀಕಾಂತ್ ಕುಲಕರ್ಣಿ ಮಾತನಾಡಿ,ಜಾಗತೀಕರಣ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ಎಂದುಕಳವಳ ವ್ಯಕ್ತಪಡಿಸಿದರು.

ಮನೆಯಲ್ಲಿ ಪಾಲಕರು ಮಕ್ಕಳಿಗೆ ಬುದ್ಧಿಮಾತು ಹೇಳಿದರೆ ಆತ್ಮಹತ್ಯೆ ಹಾದಿ ಹಿಡಿಯುವ ಅನೇಕ ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. 16 ವರ್ಷ ನಿಮ್ಮನ್ನು ಸಾಕಿ, ಬೆಳೆಸುವ ತಂದೆ-ತಾಯಿಗಳಿಗೆ ಕನಿಷ್ಠ ಮಾರ್ಗದರ್ಶನ ಮಾಡುವ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ ಅವರು, ಪಾಲಕರಿಗೆ ನೋವು ಕೊಡುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.

ಚಂದ್ರಶೇಖರ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸಿದ್ರಾಮಪ್ಪಗೌಡ ಚೇಗುಂಟಾ ಮಾತನಾಡಿ, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶನ ಮಾಡಬೇಕು. ವಿಭಾಗ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆ ಹಾಗೂ ಕಾಲೇಜಿನ ಹೆಸರು ತರುವಂತೆ ಆಶಿಸಿದರು.

ಪ್ರಾಚಾರ್ಯ ರಘುನಾಥರಡ್ಡಿ ಪಾಟೀಲ, ಶರಣಪ್ಪ ರಾಹುಲ್ ಇದ್ದರು. ಉಪನ್ಯಾಸಕ ಪ್ರಕಾಶರಡ್ಡಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಅಂಗಡಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.