ADVERTISEMENT

‘ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ’ :ಕೆ. ಅಬ್ದುಲ್ ಜಬ್ಬಾರ್

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 6:07 IST
Last Updated 22 ಜನವರಿ 2023, 6:07 IST
ಸುರಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಜರುಗಿದ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಇದ್ದರು
ಸುರಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಜರುಗಿದ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಇದ್ದರು   

ಸುರಪುರ: ‘ಅಲ್ಪಸಂಖ್ಯಾತರ ರಕ್ಷಣೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜನರು ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಹುಲ್ ಗಾಂಧಿ ಅವರು 3600 ಕಿಮೀ ಭಾರತ ಜೋಡೊ ಪಾದಯಾತ್ರೆ ಮಾಡಿರುವುದು ದೀನ ದಲಿತರ, ಬಡವರ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮತ್ತು ಸಂವಿಧಾನದ ರಕ್ಷಣೆಗಾಗಿ ಎಂಬುದನ್ನು ಬಂಧುಗಳು ನೆನಪಿಟ್ಟುಕೊಳ್ಳಬೇಕು. ಬಿಜೆಪಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಿದೆ’ ಎಂದು ಆರೋಪಿಸಿದರು.

ADVERTISEMENT

‘ಮುಸ್ಲಿಂ ಸಮುದಾಯದವರು ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಕೆಲಸ ಮಾಡುತ್ತಿದ್ದು ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು. ಈ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಬಲಿಸಬೇಕು’ ಎಂದು ಹೇಳಿದರು.

ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಮಾತನಾಡಿ, ‘ಬಿಜೆಪಿಯವರಲ್ಲಿ ನಡುಕು ಹುಟ್ಟಿದೆ. ನನ್ನ ಬಗ್ಗೆ ಅಂಜಿಕೆ ಇದೆ. ಅದಕ್ಕಾಗಿಯೇ ಇಲ್ಲಿಗೆ ಮೋದಿಯವರನ್ನು ಕರೆತಂದು ಪ್ರಚಾರ ಮಾಡಿಸಿದ್ದಾರೆ. ಮೋದಿ ಅವರನ್ನು ನೋಡಿ ಮತ ಹಾಕ್ರಿ ಎನ್ನುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಲಾಲ್ ಅಹ್ಮದ್ ಸೇಠ್ ಬಾಂಬೆ, ಪ್ರಧಾನ ಕಾರ್ಯದರ್ಶಿ ಸಿರಾಜ್ ಸಾಬ್, ಜಿಲ್ಲಾಧ್ಯಕ್ಷ ಜಹೀರ್ ಸೇಠ್, ಕಲಬುರಗಿ ಮಹಾ ನಗರ ಪಾಲಿಕೆ ಸದಸ್ಯ ಶೇಖ್ ಹುಸೇನ್ ಬಾಬಾ, ಸುರಪುರ-ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಇದ್ದರು. ದಾವುದ್ ಪಠಾಣ ಸ್ವಾಗತಿಸಿದರು. ಅಬ್ದುಲ್ ಅಲಿಂ ಗೋಗಿ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.