ADVERTISEMENT

‘ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ’

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 15:25 IST
Last Updated 5 ಸೆಪ್ಟೆಂಬರ್ 2019, 15:25 IST
 ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು
 ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು   

ಯಾದಗಿರಿ: ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಹಿಂದುಳಿದಿದ್ದು, ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹೆಚ್ಚಳ ಮಾಡಲು ಶ್ರಮಿಸಬೇಕು’ ಎಂದು ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಎಂದು ಸಲಹೆ ನೀಡಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಾದಗಿರಿ ತಾಲ್ಲೂಕಿನ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಮಾತನಾಡಿ, ‘ ಜಿಲ್ಲೆಯ ಶೈಕ್ಷಣಿಕ ಮಟ್ಟದಲ್ಲಿ ಸುಧಾರಣೆ ತರುವುದು ಶಿಕ್ಷಕರ ಕೈಯಲ್ಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು. ಪ್ರತಿಯೊಬ್ಬ ಶಿಕ್ಷಕ ಮುತುವರ್ಜಿವಹಿಸಿ ಮಕ್ಕಳ ಕಲಿಕೆಯ ಮೇಲೆ ಪ್ರಭಾವ ಬೀರಿದರೆ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆ’ ಎಂದು ಹೇಳಿದರು.‌‌‌

ADVERTISEMENT

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಕಡಿಮೆ ಇದ್ದು, ಜಿಲ್ಲೆಯ ಯಾವ ಶಾಲೆಯಲ್ಲಿಯೂ ಶೇ 100ರಷ್ಟು ಪ್ರತಿಶತ ಫಲಿತಾಂಶ ಬಂದಿಲ್ಲ. ಅದು ಒಂದೇ ದಿನದಲ್ಲಿ ಸಾಧಿಸುವಂತದಲ್ಲ. ಶಿಕ್ಷಕರ ಅವಿರತ ಶ್ರಮದಿಂದ ಶೈಕ್ಷಣಿಕ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೆಡ್‌ಕ್ರಾಸ್‌ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 19 ಜನರು ರಕ್ತದಾನ ಮಾಡಿದರು.

ಬೀದರ್‌ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭೀಮವ್ವ ಮಲ್ಲೇಶಪ್ಪ ಅಚ್ಚೋಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಶ್ರೀಶೈಲ್ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಶೀಬಾ ಜಿಲಿಯನ್ ವೈ.ಸೈಲಸ್, ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಡಿ.ಎಂ.ಹೊಸಮನಿ, ಚಿತ್ರಶೇಖರ ದೇಗಲಮಡಿ, ನಾಗಪ್ಪ ಪೋತಲ್, ಪ್ರಭು ಕಾನನ್, ನಾಗರತ್ನ ಓಲೆಕಾರ, ಮಹಿಪಾಲರಡ್ಡಿ ಜೋಳದಡಗಿ ಇದ್ದರು.

ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ನಾಡಗೀತೆ ಹಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ಸ್ವಾಗತಿಸಿದರು. ಹೊನಗೇರಾ ಪ್ರೌಢಶಾಲೆ ಶಿಕ್ಷಕ ಮಲ್ಲಿಕಾರ್ಜುನ ಕಾವಲಿ ನಿರೂಪಿಸಿದರು. ಸಿಆರ್‌ಪಿ ಹಫೀಜ್ ಪಟೇಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.