ADVERTISEMENT

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಜಿಲ್ಲಾಧಿಕಾರಿ ಅಭಿಮತ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 16:33 IST
Last Updated 12 ಸೆಪ್ಟೆಂಬರ್ 2020, 16:33 IST
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿದರು
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿದರು   

ಯಾದಗಿರಿ: ‘ಆತ್ಮಹತ್ಯೆಯು ಸಾಮಾಜಿಕ ವ್ಯವಸ್ಥೆಗೆ ಅಂಟಿದ ಕಳಂಕ. ಆತ್ಮಹತ್ಯೆಯು ಜೀವನದಲ್ಲಿ ಬರುವ ಹಲವು ಸಮಸ್ಯೆಗಳಿಗೆ ಪರಿಹಾರವಲ್ಲ’ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಇಲಾಖೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆತ್ಮಹತ್ಯೆಗೆ ಬಡತನ ಒಂದೇಕಾರಣವಲ್ಲ. ಶ್ರೀಮಂತರೂಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಮೊಬೈಲ್, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಮ್, ಫೇಸ್‍ಬುಕ್‍ನಲ್ಲಿ ತಮಗೆ ಬಹಳಷ್ಟು ಜನ ಸ್ನೇಹಿತರು ಇದ್ದಾರೆ ಎಂದು ತೋರಿಸಿಕೊಳ್ಳುತ್ತಾರೆ. ಆದರೆ, ನಿಜವಾಗಿ ಕಡಿಮೆ ಜನ ಸ್ನೇಹಿತರು ಇರುತ್ತಾರೆ. ಹೀಗಾಗಿ ಅವರು ತಮ್ಮ ಸಮಸ್ಯೆಗಳನ್ನು ಯಾರ ಮುಂದೆ ಹೇಳಿಕೊಳ್ಳಲು ಆಗದೆ ಆತ್ಮಹತ್ಯೆ ನಿರ್ಧಾರಕ್ಕೆ ಬರುತ್ತಾರೆ’ ಎಂದು ತಿಳಿಸಿದರು.

ADVERTISEMENT

ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನವಾರ ಮಾತನಾಡಿ, ‘ಜಗತ್ತಿನಲ್ಲಿ ಪ್ರತಿವರ್ಷ 8 ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಖಿನ್ನತೆ, ಕುಟುಂಬ ಕಲಹ, ವಿವಾಹ ವಿಚ್ಛೇದನ, ವೈವಾಹಿಕ ಸಮಸ್ಯೆ, ಪರೀಕ್ಷೆಯಲ್ಲಿ ಅನುತ್ತೀರ್ಣ, ರ್‍ಯಾಗಿಂಗ್, ಮಾನಸಿಕ ಕಾಯಿಲೆ, ನಿರುದ್ಯೋಗ ಸಮಸ್ಯೆ, ಮಾರಕ ರೋಗ ಸೇರಿದಂತೆ ಇತರ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವ ಮೂಲಕ ಕ್ರೀಡೆ, ಯೋಗ, ಧ್ಯಾನ, ಮನರಂಜನೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಮನೋವೈದ್ಯ ಡಾ.ಉಮೇಶ ಮಾತನಾಡಿ, ‘ಪ್ರತಿ ಬುಧವಾರ ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ಚಿಕಿತ್ಸೆ ನೀಡಲಾಗುತ್ತದೆ. ಮನೋಚೈತನ್ಯ ಕಾರ್ಯಕ್ರಮದಡಿಯಲ್ಲಿ 1ನೇ ಮಂಗಳವಾರ ಶಹಾಪುರ, 2ನೇ ಮಂಗಳವಾರ ಸುರಪುರ, 3ನೇ ಮಂಗಳವಾರ ಗುರುಮಠಕಲ್, 4ನೇ ಮಂಗಳವಾರ ಹುಣಸಗಿ ಹಾಗೂ 1ನೇ ಶುಕ್ರವಾರ ವಡಗೇರಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾನಸಿಕ ತಜ್ಞರಿಂದ ಸಲಹೆ, ಚಿಕಿತ್ಸೆ ನೀಡಲಾಗುತ್ತಿದೆ. ಉಚಿತ ಸಹಾಯವಾಣಿ ಸಂಖ್ಯೆ 104 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಲಕ್ಷ್ಮಿಕಾಂತ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಾಜೀದ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ಹಿರಿಯ ಆರೋಗ್ಯ ಸಹಾಯಕ ಮಹಿಪಾಲರೆಡ್ಡಿ ಜೋಳದಡಗಿ ಸ್ವಾಗತಿಸಿ, ನಿರೂಪಿಸಿದರು. ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತುಳಸಿರಾಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.