ADVERTISEMENT

ನವೆಂಬರ್ 26ರ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಪಾಲ್ಗೊಳ್ಳಿ

ಜೆಸಿಟಿಯು ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಸೋಮಶೇಖರ ಮನವಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 16:20 IST
Last Updated 11 ನವೆಂಬರ್ 2020, 16:20 IST
ಯಾದಗಿರಿಯ ಸ್ತ್ರೀ ಶಕ್ತಿ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಾವೇಶ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಮಾತನಾಡಿದರು
ಯಾದಗಿರಿಯ ಸ್ತ್ರೀ ಶಕ್ತಿ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಾವೇಶ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಮಾತನಾಡಿದರು   

ಯಾದಗಿರಿ: ಸಾರ್ವಜನಿಕರ ಹಾಗೂ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವ ಕಾರ್ಪೊರೇಟ್ ಪರ ನೀತಿಗಳನ್ನು ಪ್ರತಿರೋಧಿಸಲು ನವೆಂಬರ್‌ 26 ರಂದು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಹೇಳಿದರು.

ನಗರದ ಸ್ತ್ರೀ ಶಕ್ತಿ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘1991ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಹೊಸ ಆರ್ಥಿಕ ನೀತಿ ಮತ್ತು ಹೊಸ ಕೈಗಾರಿಕಾ ನೀತಿ ಮೂಲಕ ಆರಂಭಿಸಿದ ಖಾಸಗೀಕರಣ ಪ್ರಕ್ರಿಯೆಯನ್ನು ನಂತರ ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಮುಂದುವರಿಸಿಕೊಂಡು ಬಂದಿವೆ ಎಂದರು.

ADVERTISEMENT

‘ಕೇಂದ್ರ ಸರ್ಕಾರವಂತೂ ಸಂಸತ್ತಿನಲ್ಲಿ ತಮಗಿರುವ ಬಹುಮತದ ದುರ್ಲಾಭ ಪಡೆದುಕೊಂಡು, ರೈಲ್ವೆ, ಭದ್ರತಾ ವಲಯ, ವಿದ್ಯುತ್, ಬ್ಯಾಂಕಿಂಗ್, ಕಲ್ಲಿದ್ದಲು, ಪೆಟ್ರೋಲಿಯಂ, ಉಕ್ಕು, ಬಿಎಸ್‍ಎನ್‍ಎಲ್, ವಿಮಾನ ನಿಲ್ದಾಣ, ರಸ್ತೆ ಸಾರಿಗೆ ಸೇರಿದಂತೆ ಇನ್ನಷ್ಟು ವೇಗವಾಗಿ ಸಾರ್ವಜನಿಕ ವಲಯದ ಮತ್ತು ಸರ್ಕಾರಿ ವಲಯದ ಉದ್ದಿಮೆಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ಈ ಮೂಲಕ ದುಡಿಯುವ ಜನರ ಮೇಲೆ ಗದಾಪ್ರಹಾರ ಮಾಡುತ್ತಿದೆ. ಆದ್ದರಿಂದ ದುಡಿಯುವ ಜನತೆ ಪ್ರಬಲ ಚಳವಳಿಗೆ ಮುಂದಾಗಬೇಕಿದೆ‘ ಎಂದರು.

ಸಿಐಟಿಯು ಜಿಲ್ಲಾ ಸಂಚಾಲಕಿ ಸುರೇಖಾ ಕುಲಕರ್ಣಿ ಮಾತನಾಡಿ, ‘ಲಾಕ್‌ಡೌನ್ ದುರ್ಬಳಕೆ ಮಾಡಿಕೊಂಡ ಸರ್ಕಾರಗಳು, ಹಲವು ಕಾರ್ಮಿಕರ ಪರ ಇರುವ ನೀತಿಗಳನ್ನು ದುರ್ಬಲಗೊಳಿಸುವ ಮೂಲಕ ಕಾರ್ಮಿಕರ ಭದ್ರತೆಯ ಜೀವನಕ್ಕೆ ಕೊಡಲಿ ಪೆಟ್ಟು ನೀಡಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಡಿ. ಉಮಾದೇವಿ ಮಾತನಾಡಿದರು.

ಎಐಟಿಯುಸಿ ಜಿಲ್ಲಾ ಸಹ ಕಾರ್ಯದರ್ಶಿ ಕಲ್ಪನಾ ಗುರುಸುಣಗಿ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್., ಅನಿತಾ ಹಿರೇಮಠ, ಬಸವರಾಜ ದೊರೆ, ಹಣಮಂತ, ಶ್ರೀಕಾಂತ್, ರಾಧಾ, ಮಮತಾ, ನಾಗಮ್ಮ, ಕವಿತಾ, ಮಹಾದೇವಿ, ಆರತಿ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.