ADVERTISEMENT

ಟಿಇಟಿ ಕಡ್ಡಾಯಕ್ಕೆ ಶಿಕ್ಷಕರ ವಿರೋಧ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:44 IST
Last Updated 27 ನವೆಂಬರ್ 2025, 5:44 IST
ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯಾದಗಿರಿಯ ಶಿಕ್ಷಕರು 
ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯಾದಗಿರಿಯ ಶಿಕ್ಷಕರು    

ಯಾದಗಿರಿ: ಸೇವಾ ನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ನಿಯಮವನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಿ ನಿಯಮಕ್ಕೆ ತಿದ್ದುಪಡಿ ತರುವಂತೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಜಿಲ್ಲೆಯ ಶಿಕ್ಷಕರೂ ಪಾಲ್ಗೊಂಡಿದ್ದಾರೆ.

ದೇಶದ ಹಲವು ರಾಜ್ಯಗಳ ಸಾವಿರಾರು ಶಿಕ್ಷಕರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕದ 1.20 ಲಕ್ಷ ಶಿಕ್ಷಕರು ಶಿಕ್ಷಕ ವೃತ್ತಿಯಲ್ಲಿ ಮುಂದುವರಿಯಬೇಕಾದರೆ ಎರಡು ವರ್ಷದಲ್ಲಿ ಟಿಇಟಿಯನ್ನು ಕಡ್ಡಾಯವಾಗಿ ಪಾಸಾಗಬೇಕಿದೆ. ಕೇಂದ್ರ ಸರ್ಕಾರ ತಕ್ಷಣ ಸಂಸತ್ ಹಾಗೂ ಸಚಿವ ಸಂಪುಟದಲ್ಲಿ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಗಲಿ ಮಾತನಾಡಿ, ‘ಈಗಾಗಲೇ ಕರ್ನಾಟಕ ಸರ್ಕಾರ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿ ಮಾಹಿತಿ ಸಂಗ್ರಹಿಸುತ್ತಿದೆ. ಈಗಾಗಲೇ 25ರಿಂದ 30 ವರ್ಷ ವೃತ್ತಿಯಲ್ಲಿ ಸೇವೆ ಸಲ್ಲಿಸಿದವರು ಕಡ್ಡಾಯವಾಗಿ ಟಿಇಟಿ ಪಾಸ್ ಮಾಡಲೇಬೇಕು ಎಂಬ ತೀರ್ಪು ಮಾರಕವಾಗಿದೆ. ಕರ್ನಾಟಕದಲ್ಲಿ 2014ರಲ್ಲಿ ಮೊದಲ ಬಾರಿಗೆ ಟಿಇಟಿ ಜಾರಿಗೆ ಬಂದಿದ್ದು ಅದಕ್ಕೂ ಮೊದಲು ನೇಮಕಾತಿ ಹೊಂದಿದ ಶಿಕ್ಷಕರು ಟಿಇಟಿ ಬರೆಯಬೇಕೆಂದರೆ ಯಾವ ನ್ಯಾಯ’ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಯಾದಗಿರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಗೋಟ್ಲಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಾಗರೆಡ್ಡಿ ಪಾಟೀಲ, ವಡಗೇರಾ ತಾಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ ಗೊಂದನೂರು, ಪ್ರಧಾನ ಕಾರ್ಯದರ್ಶಿ ಸಾಹೇಬ್ ರೆಡ್ಡಿ ಇಟಗಿ ಸೇರಿ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.