
ಯಾದಗಿರಿ: ನಗರದ ಲಿಂಗೇರಿ ಕೋನಪ್ಪ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಮಹಿಳಾ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಶುಕ್ರವಾರ ಆಯೋಜಿಸಲಾಯಿತು.
ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಜಿ.ಎಂ. ವಿಶ್ವಕರ್ಮ, ‘18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ನೋಂದಾಯಿಸಬೇಕು. ಮತದಾರರ ಪಟ್ಟಿ ಸೇರ್ಪಡೆಗೆ ಚುನಾವಣೆ ಆಯೋಗ ನೀಡುವ ಅರ್ಜಿಯಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ, ಸೂಕ್ತ ದಾಖಲಾತಿಗಳನ್ನು ನೀಡಬೇಕು’ ಎಂದರು.
‘ಭಾರತದ ಪ್ರಜೆಗಳಾದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತದಾನ ನಮ್ಮ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ತಪ್ಪಿಸಬಾರದು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಏಳಿಗೆಗಾಗಿ ಉತ್ತಮವಾದ ಸರ್ಕಾರವನ್ನು ಆಯ್ಕೆ ಮಾಡುವ ಹೊಣೆಗಾರಿಕೆ ಮತದಾನದಲ್ಲಿದೆ’ ಎಂದು ಹೇಳಿದರು.
‘ಆಮಿಷಗಳಿಗೆ ಒಳಗಾಗದೆ ಜಾತಿ, ಧರ್ಮ, ಮತ, ಪಂಥಗಳನ್ನು ಲೆಕ್ಕಿಸದೆ ಮತದಾನ ಮಾಡಬೇಕು. ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು. ನಮ್ಮ ಅಮೂಲ್ಯವಾದ ಮತವನ್ನು ಮಾರಿಕೊಳ್ಳಬಾರದು’ ಎಂದರು.
ಎನ್‌ಎಸ್‌ಎಸ್ ಅಧಿಕಾರಿಗಳಾದ ಬಸವರಾಜ ಜುಗೇರಿ, ಸತೀಶ್ ಹವಾಲ್ದಾರ್, ಕ್ರೀಡಾ ನಿರ್ದೇಶಕ ಬಸವಲಿಂಗಪ್ಪ, ಉಪನ್ಯಾಸಕಿಯರಾದ ತನುಜಾ ಪಾಟೀಲ, ಸವಿತಾ ರಮೇಶ, ರಮಾ ಕುಲಕರ್ಣಿ, ಅಕ್ಷತಾ ಸೇರಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.