ADVERTISEMENT

ಸಿಎಂ ಗ್ರಾಮ ವಾಸ್ತವ್ಯ ಯಶಸ್ವಿಗೆ ಶ್ರಮಿಸಿ

ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2019, 16:20 IST
Last Updated 15 ಜೂನ್ 2019, 16:20 IST
ಯಾದಗಿರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಸಭೆ ನಡೆಸಿದರು
ಯಾದಗಿರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಸಭೆ ನಡೆಸಿದರು   

ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುಮಠಕಲ್ ತಾಲ್ಲೂಕಿನ ಚಂಡರಕಿಯಲ್ಲಿ ಜೂನ್ 21ರಂದು ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯವನ್ನು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಬೇಕು ಜಿಲ್ಲಾ ಉಸ್ತುವಾರಿ ರಾಜಶೇಖರ ಬಿ.ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮ ಇರುತ್ತದೆ. ಜಿಲ್ಲೆಯ ರೈತರು, ಸಾರ್ವಜನಿಕರು ತಮ್ಮ ಕುಂದು-ಕೊರತೆಗಳೊಂದಿಗೆ ಬರುತ್ತಾರೆ. ಆದ್ದರಿಂದ ಜಿಲ್ಲೆಯ ಪ್ರತಿ ಇಲಾಖಾವಾರು ಪ್ರಗತಿ ವರದಿ ಸಿದ್ಧಪಡಿಸಿಕೊಂಡಿರಬೇಕು. ಮುಖ್ಯವಾಗಿ ಕಂದಾಯ, ಕೃಷಿ, ಸಮಾಜ ಕಲ್ಯಾಣ ಇಲಾಖೆ ಯೋಜನೆಗಳು ಹಾಗೂ ಪ್ರಗತಿ ಬಗ್ಗೆ ಗಮನ ಹರಿಸಬೇಕು. ಇನ್ನು ಕಾರ್ಯಕ್ರಮದ ವೇದಿಕೆ, ಕುಡಿಯುವ ನೀರು, ಊಟ, ವಿದ್ಯುತ್ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ADVERTISEMENT

ರಜೆ ಇಲ್ಲ:
ಮುಖ್ಯಮಂತ್ರಿ ಪ್ರವಾಸ ಇರುವುದರಿಂದ ಯಾವುದೇ ಅಧಿಕಾರಿ-ಸಿಬ್ಬಂದಿ ರಜೆ ಮೇಲೆ ತೆರಳುವಂತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ಜನತಾ ದರ್ಶನ ಪೂರ್ವದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗುವುದು. ಗುರುಮಠಕಲ್ -ಚಂಡರಕಿಗೆ ಸಾರ್ವಜನಿಕರು ಉಚಿತವಾಗಿ ಪ್ರಯಾಣಿಸಲು ಬಸ್ ವ್ಯವಸ್ಥೆ ಮಾಡಲು ತಿಳಿಸಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ಜನತಾ ದರ್ಶನದಲ್ಲಿ ರೈತರ ಬೆಳೆ ಸಾಲ ಮನ್ನಾ ಕುರಿತಂತೆ ಅಹವಾಲು ಹಾಗೂ ದೂರುಗಳು ಬರಬಹುದು. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ವರದಿಯೊಂದಿಗೆ ಹಾಜರಿರಬೇಕು ಎಂದರು.

ಕಲಬುರ್ಗಿ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್ ಮಾತನಾಡಿ, ಜನತಾದರ್ಶನಕ್ಕೆ ಆಗಮಿಸುವ ಜನರಿಗೆ ಮುಖ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪ್ರತಿಯೊಂದು ಬ್ಲಾಕ್‍ಗಳಲ್ಲಿ ನೀರಿನ ಕ್ಯಾನ್ ಇಟ್ಟಿರಬೇಕು. ಜನರೇಟರ್ ವ್ಯವಸ್ಥೆ ಹಾಗೂ ಅಂದು ಮಳೆ ಬಂದರೆ ಕಾರ್ಯಕ್ರಮಕ್ಕೆ ತೊಂದರೆಯಾಗದ ರೀತಿಯಲ್ಲಿ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಮಾತನಾಡಿ, ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಲಿರುವ ಚಂಡರಕಿ ಗ್ರಾಮವು ಜಿಲ್ಲಾ ಕೇಂದ್ರದಿಂದ 46 ಕಿ.ಮೀ ದೂರದಲ್ಲಿದೆ. ಗುರುಮಠಕಲ್ ತಾಲ್ಲೂಕಿನಿಂದ 6 ಕಿ.ಮೀ. ಅಂತರವಿದೆ. ಸಚಿವರು ಹಾಗೂ ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದು ಗ್ರಾಮ ವಾಸ್ತವ್ಯದ ಶಾಲೆ ಗುರುತಿಸಲಾಗಿದೆ. ಒಂದೇ ಆವರಣದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ, ಉರ್ದು ಶಾಲೆ, ವಸತಿ ನಿಲಯ, ಅಂಗನವಾಡಿ, ಪಶು ಆಸ್ಪತ್ರೆ ಕಟ್ಟಡಗಳಿವೆ. ಇವುಗಳ ಮಧ್ಯದಲ್ಲಿರುವ ವಿಶಾಲ ಮೈದಾನ ಜನತಾದರ್ಶನಕ್ಕೆ ಸೂಕ್ತವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಕಂಬಿ, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅಶ್ವಿನ ಜಿ.ಗೌಡ, ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ (ಜನತಾ ದರ್ಶನ) ಶ್ರೀನಿವಾಸ ಎಂ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ವಿ.ಮುನಿರಾಜು, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.