ADVERTISEMENT

ಯಾದಗಿರಿ: ಎಲ್ಲಾ ಅರ್ಹರಿಗೂ ಕೋವಿಡ್ ಲಸಿಕೆ ನೀಡಲು ಸಲಹೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 16:38 IST
Last Updated 31 ಮಾರ್ಚ್ 2021, 16:38 IST
ಯಾದಗಿರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಕೆಕೆಆರ್‌ಡಿಬಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಇದ್ದರು
ಯಾದಗಿರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಕೆಕೆಆರ್‌ಡಿಬಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಇದ್ದರು   

ಯಾದಗಿರಿ: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಸೂಚಿಸಲಾಗಿರುವ ವಿವಿಧ ವರ್ಗದ ಎಲ್ಲಾ ಅರ್ಹರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ಹಾಗೂ ಇನ್ನಿತರ ವಿಷಯಗಳ ಕುರಿತು ಬುಧವಾರನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಮೊದಲನೇ ಲಸಿಕೆ ಪಡೆದಿರುವ ಮುಂಚೂಣಿ ಕಾರ್ಯಕರ್ತರಾದ ವೈದ್ಯರು, ನರ್ಸ್, ಪೊಲೀಸರು ಮುಂತಾದವರು 2ನೇ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 10,803 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪ್ರಸಕ್ತ ಪ್ರತಿದಿನ 1,150 ಪ್ರಕರಣಗಳ ಪರೀಕ್ಷೆ ನಡೆಸುತ್ತಿದ್ದು, ಇನ್ಮುಂದೆ 1,500 ಪ್ರಕರಣಗಳ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ದಿನವೊಂದಕ್ಕೆ ಸರಾಸರಿ 5 ಸಾವಿರ ಕೋವಿಡ್ ಲಸಿಕೆ ಹಾಕುತ್ತಿರುವುದಕ್ಕೆ ಮೆಚ್ಚುಗೆಯ ಮಾತನಾಡಿದ ಮುಖ್ಯಕಾರ್ಯದರ್ಶಿ ರವಿಕುಮಾರ್, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಜಿಲ್ಲೆಯಲ್ಲಿ 37 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಗುರುಮಠಕಲ್ ತಾಲ್ಲೂಕಿನ ಯಂಪಾಡ್ ಹಾಗೂ ಸುಭಾಷ್ ನಗರದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. 32 ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಈ ಹಳ್ಳಿಗಳೂ ಸೇರಿವೆ. ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಪ್ರಾದೇಶಿಕ ಆಯುಕ್ತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ವಿವಿಧ ಸಾಲಿನಲ್ಲಿ ಕೈಗೊಂಡು ಮುಗಿಸಿರುವ ಕಾಮಗಾರಿಗಳ ವಿವರಗಳನ್ನು ಮಂಡಳಿಯ ಸಾಫ್ಟ್‌ವೇರ್‌ನಲ್ಲಿ ಅಪ್ಡೇಟ್ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖ್ಯ ಕಾರ್ಯದರ್ಶಿಪಿ.ರವಿಕುಮಾರ್ ಮಾತನಾಡಿ, ಇತ್ತೀಚಿನ ಸಾಲಿನ ನೂರಾರು ಕಾಮಗಾರಿಗಳನ್ನು ಇನ್ನೂ ಆರಂಭಿಸದಿರುವುದಕ್ಕೆ ವಿವಿಧ ಏಜೆನ್ಸಿಯ ಅಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವ ಮೂಲಕಜಿಲ್ಲೆಯ ಜನತೆ ಬೆಂಗಳೂರು ಮತ್ತಿತರೆಡೆ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದರು.

ಕಳೆದ ವರ್ಷ ಕೋವಿಡ್ ಸೋಂಕು ಇಡೀ ವರ್ಷ ಕಾಡಿದ್ದರಿಂದ ಅನುದಾನದ ಸಮಸ್ಯೆಯಾಗಿದ್ದು, 2021-22ನೇ ಸಾಲಿನಲ್ಲಿ ಯಾವುದೇ ಅನುದಾನದ ಕೊರತೆಯಾಗುವುದಿಲ್ಲ. 2021-22ನೇ ಸಾಲಿಗೆ ಸಂಬಂಧಿಸಿದಂತೆ ಎಲ್ಲಾ ಕ್ರಿಯಾ ಯೋಜನೆಗಳನ್ನು ಬೇಗ ಸಿದ್ಧಪಡಿಸಿ ಮಂಜೂರಾತಿಗೆ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ದೋರನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಬಿಟ್ಟರೆ, ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಶಾಂತಿಯುತವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಇದ್ದರು.

‘18 ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ’
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಮಾತನಾಡಿ, ಸುರಪುರ ನಗರದ 31 ವಾರ್ಡ್‍ಗಳ ಪೈಕಿ 18 ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಇದೆ. ₹240 ಕೋಟಿ ವೆಚ್ಚದಲ್ಲಿ ಶೆಳ್ಳಗಿ ಗ್ರಾಮದ ಕೃಷ್ಣಾ ನದಿಯಿಂದ ಪೈಪ್‍ಲೈನ್ ಮೂಲಕ ನೀರು ಹರಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಅಂತರ್ಜಲ ವೃದ್ಧಿಯಾಗಿದ್ದು, ಈ ವರ್ಷ ಅಷ್ಟೊಂದು ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಹೇಳಿದರು.

***
ಜಿಲ್ಲೆಯಾಗಿ 10 ವರ್ಷ ಪೂರೈಸಿದ್ದರೂ, ಇನ್ನು ಅಭಿವೃದ್ಧಿ ಕಂಡಿಲ್ಲ. ಅಧಿಕಾರಿಗಳು ಸ್ವಂತ ಜಿಲ್ಲೆ ಎಂಬ ಇಚ್ಛಾಶಕ್ತಿ ಪ್ರದರ್ಶಿಸಿ ಅಭಿವೃದ್ಧಿಗೆ ಶ್ರಮಿಸಿ
-ಪಿ.ರವಿಕುಮಾರ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.