ADVERTISEMENT

ಯಾದಗಿರಿ: ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಸನ್ನದ್ಧ : ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 5:00 IST
Last Updated 22 ಆಗಸ್ಟ್ 2025, 5:00 IST
ಯಾದಗಿರಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿ ಹಲವರು ಉಪಸ್ಥಿತರಿದ್ದರು   
ಯಾದಗಿರಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿ ಹಲವರು ಉಪಸ್ಥಿತರಿದ್ದರು      

ಯಾದಗಿರಿ: ‘ಕೃಷ್ಣಾ ಹಾಗೂ ಭೀಮಾ ನದಿ ತೀರಗಳ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಜಿಲ್ಲಾಡಳಿತವು ಸರ್ವ ರೀತಿಯಲ್ಲೂ ಸನ್ನದ್ಧಗೊಂಡಿದೆ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. 

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಅವರು ಮಾತನಾಡಿದರು.

‘ನದಿಗಳ ಪಾತ್ರದ ಜನರಿಗೆ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಸೂಕ್ತವಾಗಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ನದಿ ಪಾತ್ರದ ಹಾಗೂ ಜಿಲ್ಲೆಯ ನಾಗರಿಕರಿಗೆ ಸಮಸ್ಯೆ ಬಂದಲ್ಲಿ ಸಹಾಯವಾಣಿಗೆ ಸಂಪರ್ಕಿಸಬೇಕು’ ಎಂದರು.

‘ಜಾನುವಾರುಗಳಿಗೆ ತೊಂದರೆ ಆಗದಂತೆ ನಿಗಾವಹಿಸಬೇಕು. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು. ನದಿ ಪಾತ್ರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನೇಮಿಸಲಾದ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದು ಸೂಚಿಸಿದರು.

‘ಪ್ರವಾಹ ಪರಿಸ್ಥಿತಿಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಲು ಅಗ್ನಿಶಾಮಕ ಇಲಾಖೆ ಅಧಿಕಾರಿ/ಸಿಬ್ಬಂದಿ ಸಿದ್ಧರಿದ್ದಾರೆ. ಅವಶ್ಯವಿದ್ದಲ್ಲಿ ಅವರ ಸಹಾಯ ಪಡೆಯಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳಬಾರದು, ಕೇಂದ್ರಸ್ಥಾನ ಬಿಟ್ಟು ಹೋಗಬಾರದು’ ಎಂದು ಹೇಳಿದರು.

ಭಾರಿ ಮಳೆಯಿಂದ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ವರದಿಯನ್ನು ಸಲ್ಲಿಸಲು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಶಾಲಾ, ಕಾಲೇಜು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯುತ್ ಸರಬರಾಜು ಕಡಿತವನ್ನು ಪರಿಶೀಲನೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.