ಪ್ರಾತಿನಿಧಿಕ ಚಿತ್ರ
ಯಾದಗಿರಿ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕ್ರೀಡಾಪಟು ಸೇರಿ ಇಬ್ಬರ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಯಾಣ ಕರ್ನಾಟಕ ಯೂತ್ ಅಸೋಸಿಯೇಷನ್ ಅಧ್ಯಕ್ಷ ಪುನೀತ್ ರಾಜ್ ಕಮತಗಿ ಮತ್ತು ಕಾರ್ಯದರ್ಶಿಯೂ ಆಗಿರುವ ಕ್ರೀಡಾಪಟು ಲೋಕೇಶ್ ರಾಠೋಡ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 126(2), 132, 351(2), ಜತೆಗೆ 5(3) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಅವರು ನೀಡಿದ ದೂರಿನ ಅನ್ವಯ, 2025ರ ನವೆಂಬರ್ 21ರಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳುವಾಗ ಆರೋಪಿಗಳು ಬಲವಂತವಾಗಿ ವಾಹನ ತಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಜಿಲ್ಲಾ ಕ್ರೀಡಾಂಗಣದ ಕ್ರೀಡಾ ದಾಸ್ತಾನು ಕೋಣೆಯ ಕೀ ಒಡೆದು ಬಲವಂತವಾಗಿ ತೆರೆದು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿ, ಇಲ್ಲಸಲ್ಲದ ಆರೋಪವೂ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾಂಗಣದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ಮಾಡಿದಾಗಲೂ ಅವಮಾನಕಾರಿ ಪದ ಬಳಸಿ ತೇಜೋವಧೆ ಮಾಡಿದ್ದಾರೆ. ಇದರಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ ಎಂದು ರಾಜು ಅವರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.