ಯಾದಗಿರಿ: ‘ಮಳೆ ಹಾಗೂ ಮಳೆ ಸಂಬಂಧಿತ ಹಾನಿಯ ಬಗ್ಗೆ ಸಂಪೂರ್ಣವಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ರಸ್ತೆಗಳ ದುರಸ್ತಿಗೆ ಲಭ್ಯ ಇರುವ ಅನುದಾನವನ್ನು ಬಳಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಅತಿವೃಷ್ಟಿಯಿಂದ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
‘ಅಕ್ಷರ ಅವಿಷ್ಕಾರ ಯೋಜನೆಯಡಿ ಲಭ್ಯವಿರುವ ₹ 60 ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಆಗಬೇಕು. ಶಾಲೆ, ವಸತಿ ನಿಲಯ, ಅಂಗನವಾಡಿ ಕಟ್ಟಡಗಳ ದುರಸ್ತಿ, ಕುಡಿಯುವ ನೀರು, ಶೌಚಾಲಯಗಳ ದುರಸ್ತಿಗೆ ಪ್ರಥಮ ಆದ್ಯತೆ ನೀಡಬೇಕು. ಆಯಾ ತಾಲ್ಲೂಕು ಪಂಚಾಯಿತಿ ಇಒಗಳ ಮೂಲಕ ಚರಂಡಿಗಳ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸುವಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
‘ಅತಿವೃಷ್ಟಿಯಿಂದ ಹೆಸರು ಬೆಳೆ, ಹತ್ತಿ, ತೊಗರಿ ಬೆಳೆ ಸೇರಿ ಸುಮಾರು 25 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಸುಮಾರು 187 ಮನೆಗಳು ಭಾಗಶಃ ಬಿದ್ದಿವೆ. ಏಪ್ರಿಲ್‌ನಿಂದ ಇಲ್ಲಿಯವರೆಗೆ ಮಳೆ ಸಂಬಂಧಿತ ಅವಘಡದಿಂದ ಮೂವರು ಪ್ರಾಣ ಕಳೆದುಕೊಂಡಿದ್ದು, 77 ಜಾನುವಾರು ಅಸುನೀಗಿವೆ. ಪ್ರಾಣ ಹಾನಿ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ’ ಎಂದರು.
‘ಜಿಲ್ಲೆಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ಇಲ್ಲದಿದ್ದರೂ ಕೃಷ್ಣಾ ಹಾಗೂ ಭೀಮಾ ನದಿಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ನಾರಾಯಣಪುರ ಮತ್ತು ಸನ್ನತಿ ಬ್ಯಾರೇಜ್‌ಗಳ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಮಹಾರಾಷ್ಟ್ರದಲ್ಲಿ ಸುರಿಯುವ ಮಳೆಯ ಮೇಲೂ ನಿಗಾ ಇರಿಸಬೇಕು’ ಎಂದರು.
‘ನದಿ ತೀರಗಳಲ್ಲಿ ಜನ, ಜಾನುವಾರು ಹೋಗದಂತೆ ಎಚ್ಚರಿಕೆ ನೀಡಿ. ನೋಡಲ್ ಅಧಿಕಾರಿಗಳು ತೀವ್ರ ನಿಗಾ ಇಡಬೇಕು. ಸಂಬಂಧಿಸಿದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.
ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ, ಶಾಸಕ ಶರಣಗೌಡ ಕಂದಕೂರ ಅವರು ಅತಿವೃಷ್ಟಿಯಿಂದ ಉಂಟಾದ ಕೃಷಿ ಬೆಳೆ ಹಾನಿ, ವಿದ್ಯುತ್ ಪರಿವರ್ತಕಗಳ ಹಾಗೂ ರಸ್ತೆ ಹಾನಿಯ ಕುರಿತು ಸಚಿವರ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಪರಿಹಾರ ಕುರಿತು ಸಭೆಗೆ ವಿವರಣೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಎಸ್‌ಪಿ ಪೃಥ್ವಿಕ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳೆ ಹಾನಿಯ ಸಮೀಕ್ಷೆ ಪೂರ್ಣಗೊಳಿಸಲು ಸುಮಾರು 20 ದಿನ ಆಗಬಹುದು. ಪಿಆರ್‌ಡಿ ಅನ್ವಯ 3 ಕಿ.ಮೀ. ರಾಜ್ಯ ಹೆದ್ದಾರಿ 60 ಕಿ.ಮೀ. ಜಿಲ್ಲಾ ಮುಖ್ಯ ರಸ್ತೆ ಹಾನಿಯಾಗಿದೆಹರ್ಷಲ್ ಭೋಯರ್ ಜಿಲ್ಲಾಧಿಕಾರಿ
‘ರಸ್ತೆಗಳ ದುರಸ್ತಿಗೆ ₹ 25 ಕೋಟಿ’
‘ರಸ್ತೆಗಳ ದುರಸ್ತಿಗೆ ನನ್ನ ಶಾಸಕರ ಅನುದಾನ ನಿಧಿಯಿಂದ ₹ 25 ಕೋಟಿ ಅನುದಾನವನ್ನು ರಸ್ತೆಗಾಗಿ ಕೊಟ್ಟಿದ್ದೇನೆ. ಲೋಕೋಪಯೋಗಿ ಇಲಾಖೆಗೆ ರಸ್ತೆಗಳ ನಿರ್ವಹಣೆಗಾಗಿ ₹ 13 ಕೋಟಿ ಬಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಳೆಯಿಂದ ರಸ್ತೆಗಳಿಗೆ ಸಾಕಷ್ಟು ಹಾನಿಯಾಗಿದೆ. ದುರಸ್ತಿಗೂ ಸೂಚನೆ ನೀಡಲಾಗಿದೆ. ಶಾಸಕರ ಅನುದಾನದ ಜೊತೆಗೆ ಕೆಕೆಆರ್‌ಡಿಬಿಯ ಅನುದಾನವನ್ನು ಬಳಸಿಕೊಳ್ಳಲಾಗುವುದು’ ಎಂದರು. ‘ಕೊಳ್ಳೂರ ಬಳಿ ಹೊಸ ಸೇತುವೆ ನಿರ್ಮಾಣಕ್ಕೆ ಸುಮಾರು ₹ 400 ಕೋಟಿ ಬೇಕಾಗುತ್ತದೆ. ಈಗಿರುವ ಸೇತುವೆಯ ಉದ್ದ ಮತ್ತು ಅಗಲವೂ ಹೆಚ್ಚಾಗಲಿದೆ. ಈ ಸಂಬಂಧ ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.