ಯಾದಗಿರಿ: ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಜಿಲ್ಲಾ ಸಮಿತಿ ಮುಖಂಡರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಈಚೆಗೆ ಪ್ರತಿಭಟನೆ ನಡೆಸಿದರು.
ನಗರದ ನೇತಾಜಿ ಸುಭಾಷ್ ವೃತ್ತದಲ್ಲಿ ವಿದ್ಯಾರ್ಥಿಗಳು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಮಾತನಾಡಿ, ‘ಪದವಿ ತರಗತಿಗಳು ಆರಂಭವಾಗಿ ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನಿಯೋಜನೆ ಮಾಡಿಕೊಂಡಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ’ ಎಂದರು.
‘ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿ ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರ ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಹೈಕೋರ್ಟ್ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು’ ಎಂದು ಹೇಳಿದರು.
‘ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು’ ಎಂದರು. ಅಧಿಕಾರಿಯೊಬ್ಬರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅನಿತಾ, ಮಹೇಶ್ವರಿ, ಅಶ್ವಿನಿ, ರೇಣುಕಾ, ಸೋನಿ, ಕಾವೇರಿ, ಕವಿತಾ, ಅನಿತಾ, ಸುನಿತಾ, ಮುತ್ತಮ್ಮ, ಪ್ರಿಯಾ, ಸುಷ್ಮಾ, ರಾಧಾ, ಶರಣು, ಶಂಕರ್, ಬಸವರಾಜ, ವಿಶ್ವರಾಜ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.