ADVERTISEMENT

ಯಾದಗಿರಿ | ‘ವೃಂದ ನಿಯಮಗಳಲ್ಲಿ ತಿದ್ದುಪ‍ಡಿ ತನ್ನಿ’

ರಾಜ್ಯ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಮನವಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 6:19 IST
Last Updated 13 ಆಗಸ್ಟ್ 2025, 6:19 IST
ಯಾದಗಿರಿಯಲ್ಲಿ ಮಂಗಳವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಯಾದಗಿರಿಯಲ್ಲಿ ಮಂಗಳವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಯಾದಗಿರಿ: ಪ್ರಾಥಮಿಕ ಶಾಲಾ ಶಿಕ್ಷಕರ ಬಹು ಬೇಡಿಕೆಯಾದ ಅವೈಜ್ಞಾನಿಕ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಓರಡಿಯಾ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.  

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಭರವಸೆ ನೀಡಿದ್ದರು. ಒಂದು ವರ್ಷ ಕಳೆದರೂ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಹೀಗಾಗಿ, ಸರ್ಕಾರಕ್ಕೆ ಈ ಹಿಂದಿನ ಹೋರಾಟವನ್ನು ನೆನಪಿಸುತ್ತಿದ್ದೇವೆ ಎಂದರು.

2017ರವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ನೇ ತರಗತಿಗೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿ ಆವರಿಗೆ ಪೂರ್ವಾನ್ವಯಗೊಳಿಸಬಾರದು. ಪದವೀಧರ ಶಿಕ್ಷಕರು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀಕರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅನ್ಯ ಕಾರ್ಯಗಳು ಹಾಗೂ ಆನ್‌ಲೈನ್ ಕೆಲಸಗಳಿಂದ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡವನ್ನು ಕಡಿಮೆ ಮಾಡಬೇಕು ಎಂದರು.

ಆಗಸ್ಟ್ 27ರ ಒಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರದೆ ಇದ್ದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ದೊಡ್ಡ ಹೋರಾಟ ಮಾಡಲಾಗುವುದು. ಸೆಪ್ಟೆಂಬರ್ 3ರಂದು ರಾಜ್ಯದ ಎಲ್ಲಾ ಶಿಕ್ಷಕರು ಸಾಂದರ್ಭಿಕ ರಜೆಯನ್ನು ಹಾಕುವರು. 6ರಿಂದ 8ನೇ ತರಗತಿಗಳ ಪಾಠ ಬೋಧನೆ ಬಹಿಷ್ಕರಿಸಿ, 1 ರಿಂದ5ನೇ ತರಗತಿಯವರೆಗೆ ಮಾತ್ರ ಬೋಧನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಸೆ.3ರಂದು ಯಾವುದೇ ನಿರ್ಣಯ ತೆಗೆದುಕೊಳ್ಳದೆ ಇದ್ದರೆ 4 ಮತ್ತು 5ರಂದು ಅಹೋರಾತ್ರಿ ಧರಣಿ ನಡೆಸಲಾಗುವುದು. ಹೋರಾಟದ ಭಾಗವಾಗಿ ಫ್ರೀಡಂ ಪಾರ್ಕ್‌ನಲ್ಲಿಯೇ ಶಿಕ್ಷಕರ ದಿನಾಚರಣೆಯನ್ನು ಆಚರಿಸಿ, ಬೇಡಿಕೆ ಈಡೇರುವವರೆಗೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಹೇಳಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಜೇಮಿ (ಜಗದೀಶ) ಗೋಟ್ಲಾ, ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಉಪಾಧ್ಯಕ್ಷರಾದ ಪಂಪನಗೌಡ ಪಾಟೀಲ,  ಸುವರ್ಣಾ, ಖಜಾಂಚಿ ಸೋಮರೆಡ್ಡಿ, ಸಂಘಟನಾ ಕಾರ್ಯದರ್ಶಿಗಳಾದ ಮನೋಹರ್ ಕಟ್ಟಿಮನಿ, ಸಾವಿತ್ರಿ ಕೋರಿ ಶೆಟ್ಟಿ, ಜಿಲ್ಲಾ ಸಹ ಕಾರ್ಯದರ್ಶಿಗಳಾದ ನಾಗರೆಡ್ಡಿ ಪಾಟೀಲ, ಉಮಾದೇವಿ ಪಾಟಿಲ, ಪ್ರಮುಖರಾದ ಕೊಟ್ರೇಶ್, ಹಾಜಿ ಮಲಂಗ್, ಗೋವಿಂದ್ ತನಿಖೆದಾರ್, ಶರಣು ಗೋನಾಲ್, ಕಾವೇರಿ ಪಾಟೀಲ, ಶಂಕರ್, ಸಾಬರೆಡ್ಡಿ, ಮಹಮ್ಮದ್ ಜಹೀರ್ ಹುಸೇನ್, ಲಿಂಗನಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.