ಚಿಕ್ಕಬಳ್ಳಾಪುರ: ಮುಂಗಾರು ಈಗಾಗಲೇ ಆರಂಭವಾಗಿದೆ. ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.
ಮಳೆ, ಪ್ರವಾಹ ಸಂದರ್ಭದಲ್ಲಿ ಏನೇ ತೊಂದರೆ ಆದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಜೀವ ಮತ್ತು ಆಸ್ತಿ ಹಾನಿ ಆಗದಂತೆ ಎಚ್ಚರಿಕೆ ವಹಿಸಬೇಕು. ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷತಾ ಉಪಕರಣಗಳೊಂದಿಗೆ ಸನ್ನದ್ದರಾಗಿರಬೇಕು. ಗೃಹ ರಕ್ಷಕದಳ ಸಿಬ್ಬಂದಿ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿ ಆಗದಂತೆ ಎಚ್ಚರವಹಿಸಬೇಕು. ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕಿನ ಟಾಸ್ಕ್ ಪೋರ್ಸ್ ಸಮಿತಿಯನ್ನು ಮಾಡಿ ಸಾರ್ವಜನಿಕರಿಗೆ ತುರ್ತು ಸ್ಪಂದನೆಗೆ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು ಎಂದು ತಾಕೀತು ಮಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹೊಂಡಗಳಲ್ಲಿ ಪಾಚಿಕಟ್ಟದಂತೆ ಎಚ್ಚರ ವಹಿಸಬೇಕು. ರೈತರಿಗೆ ಶೀಘ್ರವಾಗಿ ಬೇಕಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಅಧಿಕಾರಿಗಳು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದರು.
ನಗರ ಪ್ರದೇಶಗಳಲ್ಲಿ ರಸ್ತೆ ಬದಿಯ ಚರಂಡಿಗಳಲ್ಲಿನ ಹೂಳು ತೆಗೆಸಬೇಕು. ಮಳೆ ನೀರ ನುಗ್ಗುವ ತಗ್ಗು ಪ್ರದೇಶಗಳಲ್ಲಿ ಜನವಸತಿ ಬಡಾವಣೆಗಳಲ್ಲಿ ಮುನ್ನೆಚ್ಚರಿಕೆಯ ಅರಿವು ಮೂಡಿಸಬೇಕು. ಮಳೆಯಿಂದ ಸೋರುತ್ತಿರುವ, ಶಿಥಿಲವಾಗಿರುವ ಸಾರ್ವಜನಿಕ ಕಟ್ಟಡಗಳ ಮಾಹಿತಿ ಸಂಗ್ರಹಿಸಬೇಕು. ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹೇಳಿದರು.
ಹಿಂದೆ ಸಂಭವಿಸಿದ ವಿಪತ್ತುಗಳ ಘಟನಾಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತ ಉಪ ಕಾರ್ಯದರ್ಶಿ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಡಿವೈಎಸ್‌ಪಿ ವಿ.ಕೆ.ವಾಸುದೇವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.