ADVERTISEMENT

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಗುಮಾಸ್ತ ಹುದ್ದೆಗಳು

ಆರ್.ಕೆ ಬಾಲಚಂದ್ರ
Published 5 ಜುಲೈ 2023, 23:30 IST
Last Updated 5 ಜುಲೈ 2023, 23:30 IST
   

ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4545 ಕ್ಲರ್ಕ್‌ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್‌ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.

ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ‌11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 4,545ಕ್ಕೂ ಹೆಚ್ಚು ಕ್ಲರಿಕಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 253 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ADVERTISEMENT

ಆನ್‌ಲೈನ್ ಮೂಲಕ (https://www.ibps.in)ಅರ್ಜಿ ಸಲ್ಲಿಸಬೇಕು. ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಜುಲೈ 21 ಅರ್ಜಿ ಸಲ್ಲಿಸಲು ಕೊನೆ ದಿನ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಂಕಿನ ಆದ್ಯತೆ ಆದೇಶವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಆಯ್ಕೆಯ ಬ್ಯಾಂಕ್‌ಗಳ ಆದ್ಯತೆ ಕ್ರಮವನ್ನು ಸೂಚಿಸಬೇಕು.

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. ಸರ್ಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್‌ಸಿ/ಎಸ್‌ಟಿ/ಅಂಕವಿಕಲರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್‌ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್‌ಗೆ ಸಂಬಂಧಿಸಿದ ವಿಷಯ ದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology)ಯನ್ನು ಒಂದು ವಿಷಯವಾಗಿ ಓದಿರಬೇಕು). ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತ ನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು.

ಪದವಿ ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಲಿಖಿತ ದೃಢೀಕರಣ

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್ಲೋಡ್ ಮಾಡಬೇಕು,___ (ಅಭ್ಯರ್ಥಿಯ ಹೆಸರು),ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ.ನಿಜ ಮತ್ತು ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ’.

ಲಿಖಿತ ಘೋಷಣೆಯು ಇಂಗ್ಲಿಷ್‌ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್‌ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು.

ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್‌ಮೆಂಟ್‌ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಆ ಬ್ಯಾಂಕ್‌ಗಳ ಶಾಖೆಗಳಿವೆ  ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ಬ್ಯಾಂಕ್‌ ಬದಲಾವಣೆಗೆ/ಸ್ಥಳ ಬದಲಾವಣೆ ವಿನಂತಿಯನ್ನು ನಂತರದ ದಿನಗಳಲ್ಲಿ ಪರಿಗಣಿಸಲಾಗುವುದಿಲ್ಲ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ?: ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ದಾವಣಗೆರೆ,ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಶಿವಮೊಗ್ಗ, ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರು.  

ಪರೀಕ್ಷಾ ಪೂರ್ವ ತರಬೇತಿ

ಐಬಿಪಿಎಸ್ ಎಸ್ ಸಿ/ಎಸ್ ಟಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಿವೆ. ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ತರಬೇತಿ ಸ್ಥಳದ ಖರ್ಚು ವೆಚ್ಚಗಳನ್ನು ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸ ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರಗಳಿವೆ.

ಅರ್ಜಿ ಸಲ್ಲಿಕೆ ಹಾಗೂ ಅಧಿಸೂಚನೆ, ಹೆಚ್ಚಿನ ಮಾಹಿತಿಗೆ ವೆಬ್: https://www.ibps.in/ ಜಾಲತಾಣಕ್ಕೆ ಭೇಟಿ ನೀಡಿ.

ಇನ್ನೊಂದಿಷ್ಟು ಮಾಹಿತಿ...

ಕನ್ನಡದಲ್ಲಿ ಪರೀಕ್ಷೆ: ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶ ವಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು. (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ಮರೆಯದಿರಿ)

ಸಂದರ್ಶನವಿಲ್ಲ: ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಪರೀಕ್ಷೆಗಳು: ಇದೇ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ, ಸೆಪ್ಟೆಂಬರ್ –ಅಕ್ಟೋಬರ್‌ ತಿಂಗಳ ನಡುವೆ ಮುಖ್ಯ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಮುಂದಿನ ವರ್ಷ (2024) ಏಪ್ರಿಲ್‌ ವೇಳೆಗೆ ಪ್ರಾತಿನಿಧಿಕ ಹಂಚಿಕೆ ನಡೆಯುವ ಸಾಧ್ಯತೆ ಇದೆ.

(ಲೇಖಕರು: ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.