ADVERTISEMENT

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 17:44 IST
Last Updated 1 ಅಕ್ಟೋಬರ್ 2021, 17:44 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇಮಕಾತಿ ನಡೆಯಲಿದ್ದು, ಅಕ್ಟೋಬರ್‌ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

‘ನೇಮಕಾತಿ ಪರೀಕ್ಷೆ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಕೆಇಎ ಮೂಲಕ ಲಿಖಿತ ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಸಂದರ್ಶನ ಇರುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಸಲಾಗುವುದು. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿರುತ್ತದೆ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರ ಬರೆಯಬೇಕು. ಉಳಿದ ವಿಷಯಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಮಾತ್ರ ಇರುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಕೆಇಎ ವೆಬ್‌ಸೈಟ್ ಮೂಲಕ ಅ.7ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ನವೆಂಬರ್ 6 ಕೊನೆಯ ದಿನವಾಗಿರುತ್ತದೆ. ಒಟ್ಟು 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಶೇಕಡ 5ರಷ್ಟು ಹುದ್ದೆಗಳನ್ನು ಇಲಾಖೆಯ ‘ಸಿ’ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಶುಲ್ಕ ಪಾವತಿಗೆ ನ. 10 ಕೊನೆಯ ದಿನ. ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ ಮತ್ತಿತರ ಮಾಹಿತಿಗಳನ್ನು ಕೆಇಎ ವೆಬ್‌ಸೈಟ್ https://kea.kar.nic.inನಲ್ಲಿ ಪಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.