ನೀಟ್ ಪರೀಕ್ಷೆ
ಬೆಂಗಳೂರು: ಪ್ರಸಕ್ತ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, 1.49 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು. ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಬೇಕು.
ವಿದ್ಯಾರ್ಥಿಗಳನ್ನು ಎನ್‌ಟಿಎ ವತಿಯಿಂದ ನೇಮಿಸಿರುವ ಏಜೆನ್ಸಿಗಳು ನೋಂದಣಿ ಮಾಡಿಕೊಳ್ಳಲಿದ್ದು, ನಿಯೋಜಿತ ಪೊಲೀಸ್ ಸಿಬ್ಬಂದಿ ಸುರಕ್ಷತಾ ತಪಾಸಣೆ ನಡೆಸಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.
ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಮ್ಮೆ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಜಿಲ್ಲಾಡಳಿತದ ವತಿಯಿಂದ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತುಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗುವುದು.
ಪರೀಕ್ಷಾ ಕೇಂದ್ರಗಳಲ್ಲಿ ಫ್ರಿಸ್ಕಿಂಗ್ ಮತ್ತು ಜಾಮರ್ ಅಳವಡಿಸಲು ಎನ್‌ಟಿಎ ವತಿಯಿಂದ ಏಜೆನ್ಸಿಗಳನ್ನು ನಿಯೋಜಿಸಲಾಗಿದ್ದು, ಈ ಬಗ್ಗೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಖಚಿತಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ನಿಯೋಜಿತ ಅಧಿಕಾರಿ, ಸಿಬ್ಬಂದಿಯನ್ನು ಹೊರತುಪಡಿಸಿ ಇತರರಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಇರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.