ADVERTISEMENT

ಜಿಲ್ಲೆಯ ಅಭಿವೃದ್ಧಿಗಾಗಿ ಬಿಎಸ್‌ಪಿ ಬೆಂಬಲಿಸಿ: ಸಿ.ಯು. ಮಹಂತೇಶ್

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 15:07 IST
Last Updated 2 ಏಪ್ರಿಲ್ 2019, 15:07 IST

ಚಿತ್ರದುರ್ಗ:ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಗೆ (ಬಿಎಸ್‌ಪಿ) ಮತ ನೀಡಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತದಾರರು ಸಹಕರಿಸಬೇಕು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಸಿ.ಯು.ಮಹಂತೇಶ್ ಮನವಿ ಮಾಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕುರಿತು ಚಿಂತನೆ ಮಾಡಿಲ್ಲ.ಎರಡೂ ಪಕ್ಷಗಳು ಜಿಲ್ಲೆಯನ್ನು ನಿರ್ಲಕ್ಷಿಸಿದ್ದು, ಅಭಿವೃದ್ಧಿ ಪಡಿಸಲು ಸಂಪೂರ್ಣವಾಗಿ ವಿಫಲವಾಗಿವೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ದೂರಿದರು.

‘ದೇಶದಾದ್ಯಂತ ಈಗಾಗಲೇ ಬಿಜೆಪಿ ವಿರೋಧಿ ಅಲೆ ಹಬ್ಬಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮಾತಿನಲ್ಲಿ ಮೋಡಿ ಮಾಡಿ ಮತ ಗಿಟ್ಟಿಸಿಕೊಳ್ಳಲು ಮುಂದಾಗುತ್ತಿದ್ದಾರೆ.ಈ ಬಾರಿ ಜಿಲ್ಲೆಯ ಮತದಾರರು ಬಿಎಸ್‌ಪಿ ಬೆಂಬಲಿಸಿದರೆ ಭದ್ರಾ ಮೇಲ್ದಂಡೆ ಯೋಜನೆ,ವೈದ್ಯಕೀಯ ಕಾಲೇಜು,ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗ ಯೋಜನೆ ಜಾರಿಗೆ ತರಲು ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

ಬಿಎಸ್‌ಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೂನಬೇವು ಮಹಾಂತೇಶ್, ‘ಹಲವು ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೆಲಸ ಮಾಡಲು ಅವಕಾಶ ಕಲ್ಪಿಸಿದರೂ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಎಸ್‌ಪಿ ರಾಜ್ಯ ಘಟಕದ ಕಾರ್ಯದರ್ಶಿ ಎನ್. ಪ್ರಕಾಶ್,ಜಿಲ್ಲಾ ಘಟಕದ ಅಧ್ಯಕ್ಷ ಎಸ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಓಬಯ್ಯನಹಟ್ಟಿ ಬಿ. ಗಿರೀಶ್,ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ,ಮೊಳಕಾಲ್ಮುರು ತಾಲ್ಲೂಕು ಘಟಕದ ಅಧ್ಯಕ್ಷ ಟಿ. ರುದ್ರಮುನಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.