ಶಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ಮಾಜಿ ಸಚಿವ ಸೇರಿದಂತೆ ಇಬ್ಬರು ಮುಖಂಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ಲಾಲ್ ಮಾರ್ಕಂಡ ಹಾಗೂ ರಾಕೇಶ್ ಚೌಧರಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಬಿಂದಲ್ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಮಪತ್ರ ವಾಪಸ್ ಪಡೆಯುವಂತೆ ಪಕ್ಷವು ಇಬ್ಬರ ಮನ ಒಲಿಕೆಗೆ ಪ್ರಯತ್ನ ನಡೆಸಿತ್ತು. ಆದರೆ, ಕೊನೆಯ ದಿನವಾದ ಮೇ 17ರಂದು ಕೂಡ ಅವರು ನಾಮಪತ್ರ ವಾಪಸ್ ಪಡೆಯಲಿಲ್ಲ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಫೆಬ್ರುವರಿಯಲ್ಲಿ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ 6 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಎರಡು ದಿನಗಳ ನಂತರ ಅವರನ್ನು ಅನರ್ಹಗೊಳಿಸಲಾಗಿತ್ತು. ನಂತರ ಅವರು ಬಿಜೆಪಿ ಸೇರಿದ್ದರು. ಹಾಲಿ ವಿಧಾನಸಭಾ ಉಪಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. ಕ್ಷೇತ್ರದಲ್ಲಿ ಈ ಹಿಂದೆ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಸೋತಿದ್ದವರು ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾರೆ. ಈಗ ಉಚ್ಚಾಟನೆಗೊಂಡಿರುವ ಇಬ್ಬರು ಮುಖಂಡರು ಕೂಡ ಹಾಗೆ ಪಕ್ಷದ ವಿರುದ್ಧ ಬಂಡೆದಿದ್ದವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.