ಚುನಾವಣಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ರಿಜಿಜು
(ಚಿತ್ರ ಕೃಪೆ–@KirenRijiju)
ಇಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ರಿಜಿಜು ಅವರು ಪಶ್ಚಿಮ ಸಿಯಾಂಗ್ ಜಿಲ್ಲೆಯ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ವೇಳೆ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಪೆಮಾ ಖಂಡು, ಶಾಸಕರಾದ ಕೆಂಟೋ ಜಿನಿ ಮತ್ತು ನ್ಯಾಮರ್ ಕರ್ಬಕ್ ಇದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ರಿಜಿಜು, ‘ಚುನಾವಣಾ ಪ್ರಕ್ರಿಯೆಯಲ್ಲಿ ಜನರು ಶಾಂತಿಯುತವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ’ ಎಂದರು.
ಮಾಜಿ ಮುಖ್ಯಮಂತ್ರಿ ಮತ್ತು ಅರುಣಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ (APCC) ಅಧ್ಯಕ್ಷ ನಬಮ್ ತುಕಿ ಕೂಡ ಅರುಣಾಚಲ ಪ್ರದೇಶದ ಪಶ್ಚಿಮ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ನಡೆಯಲಿವೆ. ರಾಜ್ಯವು ಎರಡು ಲೋಕಸಭಾ ಸ್ಥಾನಗಳು ಹಾಗೂ 60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.
ಜೂನ್ 2 ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದರೆ, ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.