
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣಗಳಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಆಗಿರುವ ಮೋದಿ ಅವರು ಈ ರೀತಿ ತಮ್ಮ ಭಾಷಣಗಳಲ್ಲಿ ಸಮಾಜ ವಿಭಜಿಸುವ ಮಾತುಗಳನ್ನಾಡುತ್ತಿರುವುದು ಸರಿಯಲ್ಲ. ಈ ಹಿಂದಿನ ಯಾವುದೇ ಪ್ರಧಾನಿಗಳು ಈ ರೀತಿ ಭಾಷಣಗಳನ್ನು ಮಾಡಿಲ್ಲ. ಪದೇ ಪದೇ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಅವರು( ಮೋದಿ), ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧರಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಹಾಗೂ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದನ್ನು ಮರಳಿ ಮುಂದುವರಿಸಲಿದೆ ಎಂಬ ಬಿಜೆಪಿ ಹೇಳಿಕೆಗೆ ಪ್ರತ್ರಿಕ್ರಿಯಿಸಿದ ಖರ್ಗೆ, ನಾವು ಯಾವುದೇ ಬುಲ್ಡೋಜರ್ ಅನ್ನು ಎಲ್ಲಿಯೂ, ಯಾರ ಮೇಲೂ ಬಳಸುವುದಿಲ್ಲ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಗಳಲ್ಲಿ ಸಮಾಜವನ್ನು ವಿಭಜಿಸುವ ಮಾತುಗಳನ್ನು ಆಡುತ್ತಿದ್ದಾರೆ. ಕಾಂಗ್ರೆಸ್ ಎಂದೂ ಮಾಡದಿರುವ ಕೆಲಸಗಳನ್ನು ಮಾಡಲಿದೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ಅವರನ್ನು ಪ್ರಚೋದಿಸುತ್ತಿದ್ದಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವ ಕಾರ್ಯ ಮಾಡುತ್ತದೆ. ಜಿಎಸ್‌ಟಿ ಬದಲಿಗೆ ಸರಳ ಏಕರೂಪ ದರದ ಜಿಎಸ್‌ಟಿಯನ್ನು ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.