ADVERTISEMENT

ಉಚಿತ ಕೊಡುಗೆ: ವಿಚಾರಣೆಗೆ ಒಪ್ಪಿದ ನ್ಯಾಯಾಲಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 23:48 IST
Last Updated 20 ಮಾರ್ಚ್ 2024, 23:48 IST
<div class="paragraphs"><p>ಸುಪ್ರೀಂ ಕೋರ್ಟ್‌&nbsp;</p></div>

ಸುಪ್ರೀಂ ಕೋರ್ಟ್‌ 

   

ನವದೆಹಲಿ: ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಉಚಿತ ಕೊಡುಗೆಗಳನ್ನು ಘೋಷಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಪ್ರಕರಣಗಳ ಪಟ್ಟಿಗೆ ಸೇರಿಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ.

ಈ ರೀತಿ ಮಾಡುವ ರಾಜಕೀಯ ಪಕ್ಷಗಳ ನೋಂದಣಿಯನ್ನು ರದ್ದುಪಡಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೂಡ ಅರ್ಜಿಯಲ್ಲಿ ಕೋರಲಾಗಿದೆ. ‘ಇದು ಮುಖ್ಯವಾದುದು, ಇದನ್ನು ನಾವು ಗುರುವಾರ ಇರಿಸಿಕೊಳ್ಳುತ್ತೇವೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇದ್ದ ಪೀಠವು ಹೇಳಿದೆ.

ADVERTISEMENT

ವಕೀಲ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ‘ಚುನಾವಣೆಯ ಮೇಲೆ ಕಣ್ಣಿಟ್ಟು ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳನ್ನು ಘೋಷಿಸುವ ಈಚಿನ ವಿದ್ಯಮಾನವು ಪ್ರಜಾತಾಂತ್ರಿಕ ಮೌಲ್ಯಗಳ ಉಳಿವಿಗೆ ಎದುರಾಗಿರುವ ಅತಿದೊಡ್ಡ ಬೆದರಿಕೆ. ಇದು ಸಂವಿಧಾನದ ಆಶಯಗಳಿಗೆ ಹಾನಿ ಉಂಟುಮಾಡುತ್ತದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

‘ಈ ಅನೈತಿಕ ಪದ್ಧತಿಯು ಅಧಿಕಾರದಲ್ಲಿ ಉಳಿದುಕೊಳ್ಳಲು ಮತದಾರರಿಗೆ ಲಂಚ ಕೊಡುವುದಕ್ಕೆ ಸಮ’ ಎಂದು ಅದರಲ್ಲಿ ಹೇಳಲಾಗಿದೆ. ‘ಅತಾರ್ಕಿಕವಾದ ರೀತಿಯಲ್ಲಿ ಉಚಿತ ಕೊಡುಗೆಗಳನ್ನು ರಾಜಕೀಯ ಪಕ್ಷಗಳು ಸಾರ್ವಜನಿಕರ ಹಣ ಬಳಸಿ ಚುನಾವಣೆಗೆ ಮೊದಲು ನೀಡಬಾರದು ಎಂಬ ನಿಯಮವನ್ನು ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಬೇಕು’ ಎಂಬ ಕೋರಿಕೆ ಕೂಡ ಅರ್ಜಿಯಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.