ದಾವಣಗೆರೆ: ಮಾಜಿ ಶಾಸಕ ಮಹಿಮ ಪಟೇಲ್ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್, ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್‌ಗೆ ಸಿಗುವುದು ಬಹುತೇಕ ಖಚಿತವಾಗುತ್ತಿದಂತೆ ಟಿಕೆಟ್ ಪಡೆಯಲು ತೀವ್ರ ಯತ್ನ ನಡೆಸಿದ್ದ ಮಹಿಮ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮ, 2004ರಲ್ಲಿ ಚನ್ನಗಿರಿ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ವಿಧಾನಸಭೆಗೆ ಆರಿಸಿ ಬಂದಿದ್ದರು. 2008ರ ವಿಧಾನಸಭಾ ಚುನಾವಣೆಯ ನಂತರ ಅವರು ಕಾಂಗ್ರೆಸ್ ಸೇರಿದ್ದರು.
‘2013ರ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿಲ್ಲ. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿತ್ತು. ಆದರೆ, ಈಗಲೂ ಅವರಿಗೆ ಪಕ್ಷ ಅನ್ಯಾಯ ಮಾಡಿದೆ. ಹಾಗಾಗಿ, ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಎ.ಎಂ. ಉಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.
ಮಲ್ಲಿಕಾರ್ಜುನ್ ಶಾಸಕರಾಗಿದ್ದಾರೆ. ಅವರ ತಂದೆ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾರೆ. ಆದರೂ ಮತ್ತೆ ಅವರಿಗೇ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕೊಟ್ಟ ಮಾತು ತಪ್ಪಿದ್ದಾರೆ. ಹಾಗಾಗಿ, ಮನನೊಂದು ಮಹಿಮ ಅವರೊಂದಿಗೆ ಸಾವಿರಾರು ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.