ADVERTISEMENT

ಕೃಷ್ಣಯ್ಯ ಶೆಟ್ಟಿ ಸೇರ್ಪಡೆ: ಎಐಸಿಸಿ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2014, 19:30 IST
Last Updated 23 ಮಾರ್ಚ್ 2014, 19:30 IST

ಬೆಂಗಳೂರು: ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಕಳುಹಿಸಿದ್ದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.

ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳು­ವುದಕ್ಕೆ ಸಂಬಂಧಿಸಿದಂತೆ ಕಳುಹಿಸಿದ್ದ ಪ್ರಸ್ತಾವವನ್ನು ಸೋನಿಯಾ ಅವರು ಒಪ್ಪಿಕೊಂಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಅವರು ಶನಿ­ವಾರ ಪರಮೇಶ್ವರ್‌ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಮೂಲಗಳ ಪ್ರಕಾರ ಒಂದೆ­ರಡು ದಿನಗಳಲ್ಲಿ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ­ಯಲ್ಲಿ ಬಿಜೆಪಿ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಕೃಷ್ಣಯ್ಯ ಶೆಟ್ಟಿ ಅವರಿಗೆ ಟಿಕೆಟ್‌ ನಿರಾಕರಿಸಿತ್ತು. ಭ್ರಷ್ಟಾಚಾರ ಆರೋ­ಪ­ದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಕಾರಣ­ಕ್ಕಾಗಿ ಟಿಕೆಟ್‌ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಅವರು ಪಕ್ಷದಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು. 2013ರ ಮೇ ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಅವರು ಕೋಲಾರದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಸಭೆಯೊಂದರಲ್ಲಿ ಭಾಗವಹಿಸಿದ್ದರು.

‘ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್‌ ಸೇರಿದ್ದಾರೆ’ ಎಂದು ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಆ ಸಭೆಯಲ್ಲಿ ಪ್ರಕಟಿಸಿದ್ದರು. ಆದರೆ, ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರು ಕೃಷ್ಣಯ್ಯ ಶೆಟ್ಟಿ ಸೇರ್ಪಡೆಯನ್ನು ವಿರೋಧಿಸಿದ್ದರು.

ಈ ವಿವಾದ ಕೆಪಿಸಿಸಿ ಕಚೇರಿವರೆಗೂ ತಲುಪಿತ್ತು. ಕೃಷ್ಣಯ್ಯ ಶೆಟ್ಟಿ ಅವರ ಪಕ್ಷ ಸೇರ್ಪಡೆಯನ್ನು ತಡೆ ಹಿಡಿದಿದ್ದ ಪರಮೇಶ್ವರ್‌, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಸಂಬಂಧಿಸಿದ ಪ್ರಸ್ತಾವವನ್ನು ಹೈಕಮಾಂಡ್‌ಗೆ ರವಾನಿಸಿದ್ದರು. ಅಂತಿಮ ನಿರ್ಧಾರ ಕೈಗೊಳ್ಳುವ ಸಂಬಂಧ ನಿರ್ದೇಶನ ನೀಡುವಂತೆ ಕೋರಿದ್ದರು.

ಕೃಷ್ಣಯ್ಯ ಶೆಟ್ಟಿ ಅವರಿಗೆ ಸಂಬಂಧಿಸಿದ ಪ್ರಸ್ತಾವವನ್ನು ದೀರ್ಘ ಕಾಲದಿಂದ ಎಐಸಿಸಿ ವರಿಷ್ಠರು ಬಾಕಿ ಇರಿಸಿಕೊಂಡಿದ್ದರು. ಈಗ ಅದನ್ನು ಇತ್ಯರ್ಥ ಮಾಡಿರುವ ಸೋನಿಯಾ ಗಾಂಧಿ, ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಸಮ್ಮತಿಸಿದ್ದಾರೆ.

ಭ್ರಷ್ಟಾಚಾರದ ಆರೋಪ: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದ ಕೃಷ್ಣಯ್ಯ ಶೆಟ್ಟಿ, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳನ್ನು ಎದುರಿಸುತ್ತಿರುವ ಅವರು, ಬಿಜೆಪಿ ಮುಖಂಡ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಜೈಲು ವಾಸವನ್ನೂ ಅನುಭವಿಸಿದ್ದರು.

ರಿಯಲ್‌ ಎಸ್ಟೇಟ್‌ ಉದ್ಯಮಿಯಾ­ಗಿರುವ ಕೃಷ್ಣಯ್ಯ ಶೆಟ್ಟಿ, ವಸತಿ ಬಡಾವಣೆಯೊಂದರ ನಿರ್ಮಾಣದ ಸಂದರ್ಭದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರ್‌ನಿಂದ ಸಾಲ ಪಡೆದು, ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು, ಕೃಷ್ಣಯ್ಯ ಶೆಟ್ಟಿ ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಯಡಿಯೂರಪ್ಪ ಅವರು ಮುಖ್ಯ­ಮಂತ್ರಿ­ಯಾಗಿದ್ದ ಅವಧಿಯಲ್ಲಿ ಬೆಂಗಳೂರಿನ ಕೆ.ಆರ್‌.ಪುರ ಸಮೀಪದ ರಾಚೇನಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಆರೋಪ ಎದುರಿಸುತ್ತಿದ್ದಾರೆ.

ಈ ಸಂಬಂಧ ವಕೀಲ ಸಿರಾಜಿನ್‌ ಬಾಷಾ ಸಲ್ಲಿಸಿದ್ದ ಖಾಸಗಿ ದೂರನ್ನು ದಾಖಲಿಸಿಕೊಂಡ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಯಡಿಯೂರಪ್ಪ ಹಾಗೂ ಕೃಷ್ಣಯ್ಯ ಶೆಟ್ಟಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಜಾಮೀನು ಪಡೆದು ಅವರು ಜೈಲಿನಿಂದ ಹೊರಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.