ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆ ಶುಕ್ರವಾರ ನವದೆಹಲಿಯಲ್ಲಿ ನಡೆಯಲಿದ್ದು, ಈ ಬಗ್ಗೆ ಖಚಿತ ನಿರ್ಧಾರ ಹೊರಬೀಳಲಿದೆ.
ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಪಟ್ಟಿಯಲ್ಲಿ ಯುವ ಜನತೆ ಹಾಗೂ ಮಹಿಳೆಯರಿಗೆ ಹೆಚ್ಚಿನ ಒತ್ತು ಕೊಡುವ ನಿರೀಕ್ಷೆಗಳಿವೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈ ಎರಡು ಸಮೂಹದ ಬಗ್ಗೆ ಹೆಚ್ಚು ಒತ್ತು ನೀಡುತ್ತಲೇ ಬಂದಿರುವುದರಿಂದ, ಕಾಂಗ್ರೆಸ್‌ನ ಚುನಾವಣಾ ಭವಿಷ್ಯವನ್ನು ಬದಲಾಯಿಸುವ ನಿಟ್ಟಿನಲ್ಲಿ ಇದು ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
ಮಹಿಳಾ ಕಾಂಗ್ರೆಸ್, ಈಗಿನ 25 ಸಂಸದರ ಜೊತೆಗೆ ಇತರ 35 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿದೆ. ಯುವ ಕಾಂಗ್ರೆಸ್ ಕೂಡ 75 ಹೆಸರುಗಳನ್ನು ಹೊಂದಿರುವ ಅಂತಿಮ ಪಟ್ಟಿಯನ್ನು ಪಕ್ಷದ ಮುಂದಿಟ್ಟಿದೆ.
ರಾಜನಾಥ್ ವಿರುದ್ಧ ಮಹಿಳಾ ಅಭ್ಯರ್ಥಿ?: ಉತ್ತರ ಪ್ರದೇಶದ ಲಖನೌ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ವಿರುದ್ಧ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸಿದೆ.
ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ರೀಟಾ ಬಹುಗುಣ ಜೋಶಿ ಅವರು ಲಖನೌದಿಂದ ಪ್ರಬಲ ಸ್ಪರ್ಧಾಕಾಂಕ್ಷಿ.
ಗಾಜಿಯಾಬಾದ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಜನಾಥ್ ಸಿಂಗ್ ಅವರು ಈ ಬಾರಿ ಲಖನೌದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೊಸೆ ಕರುಣಾ ಶುಕ್ಲಾ ಅವರು ಛತ್ತೀಸಗಡದ ವಿಲಾಸ್‌ಪುರದಿಂದ ಕಣಕ್ಕಿಳಿಯುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.