ನವದೆಹಲಿ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್ ಕಗ್ಗಂಟನ್ನು ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಬಗೆಹರಿಸಿದ್ದು, ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ.ಗೌತಮ್ ಅವರಿಗೆ ಮಣೆ ಹಾಕಿದೆ.
ಬೆಂಗಳೂರು ಕೇಂದ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಗೌತಮ್ ಅವರು ಮಾಜಿ ಮೇಯರ್ ಕೆ.ಸಿ. ವಿಜಯಕುಮಾರ್ ಅವರ ಪುತ್ರ.
ಬಲಗೈ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಬಣ ಪಟ್ಟು ಹಿಡಿದಿತ್ತು. ತಮ್ಮ ಅಳಿಯ ಕೆ.ಜಿ.ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಒತ್ತಡ ಹೇರಿದ್ದರು. ಮುನಿಯಪ್ಪ ಕುಟುಂಬದವರಿಗೆ ಟಿಕೆಟ್ ನೀಡುವುದಕ್ಕೆ ರಮೇಶ್ ಕುಮಾರ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರು ಹಾಗೂ ಮುಖಂಡರ ಜತೆಗೆ ಸಮಾಲೋಚನೆ ನಡೆಸಿ ಮನವೊಲಿಸಿದ್ದರು. ಮುನಿಯಪ್ಪ ಕುಟುಂಬ ಹೊರತುಪಡಿಸಿ ಯಾರಿಗೇ ಟಿಕೆಟ್ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಜಿಲ್ಲೆಯ ಶಾಸಕರು ಹೇಳಿದ್ದರು. ಈ ಸೂತ್ರಕ್ಕೂ ಮುನಿಯಪ್ಪ ತಕರಾರು ಎತ್ತಿದ್ದರು. ಎಡಗೈ ಸಮುದಾಯಕ್ಕೆ ಅವಕಾಶ ನೀಡುವಂತೆ ರಾಜ್ಯ ಘಟಕವು ಹೈಕಮಾಂಡ್‌ಗೆ ಶಿಫಾರಸು ಮಾಡಿತ್ತು. ರಮೇಶ್ ಕುಮಾರ್ ಹಾಗೂ ಮುನಿಯಪ್ಪ ಬಣಗಳ ಜಗಳದಿಂದಾಗಿ ಗೌತಮ್ ಅವರಿಗೆ ‘ಅದೃಷ್ಟ’ ಖುಲಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.