ADVERTISEMENT

ಬೆಂಗಳೂರು: ಅಮಿತ್‌ ಶಾ ನೇತೃತ್ವದಲ್ಲಿ BJP-JDS ಜಂಟಿ ಕೋರ್‌ ಕಮಿಟಿ ಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 6:15 IST
Last Updated 2 ಏಪ್ರಿಲ್ 2024, 6:15 IST
<div class="paragraphs"><p>ಅಮಿತ್‌ ಶಾ (ಸಂಗ್ರಹ ಚಿತ್ರ)</p></div>

ಅಮಿತ್‌ ಶಾ (ಸಂಗ್ರಹ ಚಿತ್ರ)

   

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳ ಮಧ್ಯೆ ಸಮನ್ವಯ ಸಾಧಿಸುವುದು ಮತ್ತು ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಜಂಟಿ ಕೋರ್‌ ಕಮಿಟಿ ಸಭೆ ಆರಂಭವಾಗಿದೆ.

ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಕ್ಕಾಗಿ ಮಂಗಳವಾರ ಬೆಳಿಗ್ಗೆ ನಗರಕ್ಕೆ ಬಂದಿಳಿದ ಅಮಿತ್‌ ಶಾ, ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ನಾಯಕರ ಜತೆ ಮೊದಲ ಸುತ್ತಿನ ಸಭೆ ನಡೆಸಿದ ಅವರು ಚುನಾವಣಾ ಸಿದ್ಧತೆ ಮತ್ತು ರಾಜ್ಯದಲ್ಲಿನ ರಾಜಕೀಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ADVERTISEMENT

ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕೆಂಬ ಉದ್ದೇಶದಿಂದ ಎರಡೂ ಪಕ್ಷಗಳ ಜಂಟಿ ಕೋರ್‌ ಕಮಿಟಿ ಸಭೆ ಆರಂಭಿಸಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಹಲವು ನಾಯಕರು ಸಭೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.