ADVERTISEMENT

ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧ: ಸಚಿವ ಕೃಷ್ಣ ಬೈರೇಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಏಪ್ರಿಲ್ 2024, 11:08 IST
Last Updated 5 ಏಪ್ರಿಲ್ 2024, 11:08 IST
<div class="paragraphs"><p>ಸಚಿವ ಕೃಷ್ಣ ಬೈರೇಗೌಡ</p></div>

ಸಚಿವ ಕೃಷ್ಣ ಬೈರೇಗೌಡ

   

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧವಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

'ಆರ್ಥಿಕತೆ ಹಾಗೂ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಸತ್ಯ ಹಾಗೂ ವಾಸ್ತವದ ನೆಲೆಯಲ್ಲಿ ಚರ್ಚೆ ನಡೆಸಲು ನಾಗರಿಕ ಸಮಾಜ ನೀಡಿರುವ ಆಹ್ವಾನವನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು, ಕೇಂದ್ರ ಹಣಕಾಸು ಸಚಿವರನ್ನು ಮುಕ್ತ ಚರ್ಚೆಗೆ ಆಹ್ವಾನಿಸಿದ್ದೇವೆ. ಅವರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ' ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ನಾಯಕರ ನಡುವಣ ಆರೋಪ ಪ್ರತ್ಯಾರೋಪಗಳು ಬಿರುಸುಗೊಂಡಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಅಧಿಕಾರಕ್ಕೇರಿದ ಮೊದಲ ದಿನದಿಂದಲೂ ಅಬ್ಬರಿಸುತ್ತಿದ್ದಾರೆ. ಆದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಗೃಹ ಸಚಿವ ಅಮಿತ್‌ ಶಾ ಅವರು, ಸಿದ್ದರಾಮಯ್ಯ ಆರೋಪವನ್ನು ಅಲ್ಲಗಳೆಯುತ್ತಾ ಬಂದಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಏಪ್ರಿಲ್‌ 2ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ, 'ಕರ್ನಾಟಕ ಬರದಿಂದ ಸಂಕಷ್ಟಕ್ಕೆ ತುತ್ತಾಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಬರದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದೂ ಅಲ್ಲದೇ, ಪರಿಹಾರಕ್ಕೆ ಮೂರು ತಿಂಗಳು ತಡವಾಗಿ ಮನವಿ ಸಲ್ಲಿಸಿದೆ. ಈಗ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ' ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ, ಸಿದ್ದರಾಮಯ್ಯ, 'ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಮೂರು ತಿಂಗಳು ತಡವಾಗಿ ಮನವಿ ಸಲ್ಲಿಸಿದೆ ಎಂಬ ಆರೋಪಕ್ಕೆ ನೀವು ಬಯಸುವ ಕ್ರಮದಲ್ಲೇ ಉತ್ತರ ಕೊಡುತ್ತೇನೆ. ನಾನು ನಿಮ್ಮ ಮುಂದಿಡುವ ಸತ್ಯವನ್ನು ಸುಳ್ಳೆಂದು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಆಗದಿದ್ದರೆ ನೀವು ಏನು ಮಾಡಬೇಕು ಎಂಬುದನ್ನು ನೀವೇ ನಿರ್ಧರಿಸಿ' ಎಂದು ತಿರುಗೇಟು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.