ADVERTISEMENT

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿ.ಎನ್‌.ಚಂದ್ರಪ್ಪಗೆ ‘ಕೈ’ ಟಿಕೆಟ್

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 17:26 IST
Last Updated 21 ಮಾರ್ಚ್ 2024, 17:26 IST
<div class="paragraphs"><p>ಬಿ.ಎನ್‌.ಚಂದ್ರಪ್ಪ</p></div>

ಬಿ.ಎನ್‌.ಚಂದ್ರಪ್ಪ

   

ಚಿತ್ರದುರ್ಗ: ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಅವರು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಹುರಿಯಾಳಾಗಿದ್ದಾರೆ. ಎಐಸಿಸಿ ಗುರುವಾರ ರಾತ್ರಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್‌ಗೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಆಂತರಿಕ ಸಮೀಕ್ಷೆ, ಜಾತಿ ಸಮೀಕರಣ ಸೇರಿ ಹಲವು ರೀತಿಯ ಲೆಕ್ಕಾಚಾರ ಹಾಕಿದ ಕೆಪಿಸಿಸಿ ಮೂವರು ಆಕಾಂಕ್ಷಿಗಳ ಹೆಸರುಗಳನ್ನು ಶಿಫಾರಸು ಮಾಡಿತ್ತು. ಬಿ.ಎನ್‌.ಚಂದ್ರಪ್ಪ, ಬಿ.ತಿಪ್ಪೇಸ್ವಾಮಿ ಹಾಗೂ ನೇರಲಗುಂಟೆ ಎಂ.ರಾಮಪ್ಪ ಅವರ ಹೆಸರು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಆಗಿದ್ದವು. ಅಂತಿಮವಾಗಿ ಚಂದ್ರಪ್ಪ ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ.

ADVERTISEMENT

ಮಾರ್ಚ್‌ 8ರಂದು ಎಐಸಿಸಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಬಣ ರಾಜಕಾರಣ ಹಾಗೂ ಟಿಕೆಟ್‌ ಆಕಾಂಕ್ಷಿಗಳ ಬಿಗಿ ಪಟ್ಟಿನ ಕಾರಣಕ್ಕೆ ಮೊದಲ ಪಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಘೋಷಣೆ ತಡೆಹಿಡಿಯಲಾಗಿತ್ತು. ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರ ಪುತ್ರ ವಿನಯ್‌ ತಿಮ್ಮಾಪುರ ಹೆಸರು ಕೂಡ ಮುನ್ನೆಲೆಗೆ ಬಂದಿತ್ತು. ಚಂದ್ರಪ್ಪ ಅವರ ಜಾತಿ ವಿಚಾರ ಹೈಕಮಾಂಡ್‌ ಅಂಗಳವನ್ನು ತಲುಪಿತ್ತು.

ಬಿ.ಎನ್‌.ಚಂದ್ರಪ್ಪ ಅವರು ಮೂಲತಃ ಕಾಂಗ್ರೆಸಿಗರು. ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿಯಲ್ಲಿ 1955ರಲ್ಲಿ ಜನಿಸಿದ ಇವರು, 1980ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. 1983ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, 1992ರಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕೆಪಿಸಿಸಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

2002ರಲ್ಲಿ ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ (ಲಿಡ್ಕರ್‌) ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಮೂಡುಗೆರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 2014ರಲ್ಲಿ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಐದು ವರ್ಷ ಸಂಸದರಾಗಿದ್ದ ಅವರು, 2019ರ ಚುನಾವಣೆಯಲ್ಲಿ ಎ.ನಾರಾಯಣಸ್ವಾಮಿ ವಿರುದ್ಧ ಸೋಲು ಕಂಡಿದ್ದರು. 2024ರ ಚುನಾವಣೆಗೆ ಟಿಕೆಟ್‌ ಗಟ್ಟಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಟಿಕೆಟ್‌ ಕೋರಿ 24 ಆಕಾಂಕ್ಷಿಗಳು
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಕೋರಿ 24 ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಕೆಪಿಸಿಸಿ ಪ್ರತಿನಿಧಿಯಾಗಿ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಟಿಕೆಟ್ ಆಕಾಂಕ್ಷಿಗಳು ಅವಕಾಶ ಕೋರಿದ್ದರು. ಚಿತ್ರದುರ್ಗ ಜಿಲ್ಲೆಯ ಆರು ಹಾಗೂ ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕ ಅಭೂತಪೂರ್ವ ಗೆಲುವಿನ ಕಾರಣಕ್ಕೆ ಕೈ ಪಾಳೆಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ದಂಡು ಸೃಷ್ಟಿಯಾಗಿತ್ತು.

ಆಕಾಂಕ್ಷಿಗಳ ತೀವ್ರ ಪೈಪೋಟಿ

2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ತಿಪ್ಪೇಸ್ವಾಮಿ ಟಿಕೆಟ್‌ ಗಿಟ್ಟಿಸಲು ತೀವ್ರ ಪೈಪೋಟಿ ನಡೆಸಿದರು. ಸ್ಥಳೀಯ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್‌ ಎದುರು ಇಟ್ಟಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ರಾಮಪ್ಪ ಅವರೂ ಟಿಕೆಟ್‌ಗೆ ಪಟ್ಟು ಹಿಡಿದ್ದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಸಮುದಾಯಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಡ ಹೇರಿದ್ದರು. ಅಂತಿಮವಾಗಿ ಕಾಂಗ್ರೆಸ್‌ ವರಿಷ್ಠರು ಚಂದ್ರಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.