ಮೈಸೂರು: ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮತ ಯಾಚಿಸುತ್ತಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಆದರೆ, ಜೆಡಿಎಸ್ ಅಭ್ಯರ್ಥಿ ಅಭಿಷೇಕ್ ಇನ್ನೂ ಪ್ರಚಾರ ಕಾರ್ಯವನ್ನೇ ನಡೆಸುತ್ತಿಲ್ಲ. ಅವರು ನಿಷ್ಕ್ರಿಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಭ್ಯರ್ಥಿಯೇ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿರುವುದರಿಂದ, ಜೆಡಿಎಸ್ ಕಾರ್ಯಕರ್ತರಲ್ಲೂ ಉತ್ಸಾಹ ಇಲ್ಲದಂತಾಗಿದೆ. ಅಲ್ಲದೇ, ಆ ಪಕ್ಷದಲ್ಲಿ ಯಾವುದೇ ಚಟುವಟಿಕೆಗಳು ಕೂಡ ಕಂಡುಬರುತ್ತಿಲ್ಲ. ಇದು ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅಲ್ಲದೇ, ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪರೋಕ್ಷವಾಗಿ ಬೆಂಬಲ ನೀಡುತ್ತಿದೆಯೇ ಎಂಬ ಪ್ರಶ್ನೆಯೂ ಎದ್ದಿದೆ. ಕಾಂಗ್ರೆಸ್ ವಿರುದ್ಧದ ತಂತ್ರಗಾರಿಕೆಯಲ್ಲಿ ಜೆಡಿಎಸ್ ವಿಫಲವಾಗಿದೆ ಎನ್ನಲಾಗುತ್ತಿದೆ. ಕ್ರಿಯಾಶೀಲವಾಗಿಲ್ಲದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಸಾಧ್ಯತೆಯೂ ಇದೆ.
ಈ ಬಗ್ಗೆ ಪ್ರತಿಕ್ರಿಯೆಗೆ ಅಭಿಷೇಕ್ ಲಭ್ಯವಾಗಲಿಲ್ಲ.
‘ಅಭಿಷೇಕ್ ಹೋದ ಚುನಾವಣೆಯಲ್ಲಿ ನಮ್ಮ ಪಕ್ಷದಿಂದಲೇ ಸ್ಪರ್ಧಿಸಿ ಸೋತಿದ್ದರು. ಅವರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಲಾಗಿದೆ. ಆರಂಭದಲ್ಲಿ ಸ್ವಲ್ಪ ಓಡಾಡಿದ್ದರು. ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸುವುದು ಘೋಷಣೆಯಾದ ನಂತರ ನಿಷ್ಕ್ರಿಯವಾಗಿದ್ದಾರೆ. ನಮ್ಮ ಸಂಪರ್ಕಕ್ಕೂ ಸಿಕ್ಕಿಲ್ಲ. ಏನು ಸಮಸ್ಯೆಯಾಗಿದೆ ಎನ್ನುವುದೂ ಗೊತ್ತಿಲ್ಲ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹಸ್ವಾಮಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
‘ವಿಷಯವು ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೂ ಹೋಗಿದೆ. ಮೊದಲ ಪಟ್ಟಿ ಕೊನೆ ಏನಲ್ಲ, ಸಕ್ರಿಯರಲ್ಲದವರನ್ನು ಬದಲಾಯಿಸಬೇಕಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಬೇರೆಯವರು ಸಂಪರ್ಕದಲ್ಲಿದ್ದಾರೆ. ವರುಣದಲ್ಲಿ ಅಭ್ಯರ್ಥಿ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ’ ಎಂದು ಹೇಳಿದರು.
ಈ ಕ್ಷೇತ್ರದಲ್ಲಿ ಬಿಜೆಪಿಯು ಪ್ರಬಲ ಅಭ್ಯರ್ಥಿಗೆ ಹುಡುಕಾಟ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.