ADVERTISEMENT

ಕೆ.ಸಿ ವ್ಯಾಲಿ: 3ನೇ ಹಂತದಲ್ಲಿ ನೀರು ಸಂಸ್ಕರಣೆ: ಕುಮಾರಸ್ವಾಮಿ ಘೋಷಣೆ

ಚುನಾವಣಾ ಪ್ರಚಾರ ಸಭೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 14:54 IST
Last Updated 13 ಏಪ್ರಿಲ್ 2019, 14:54 IST
ಕೋಲಾರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಮುಖಂಡರು ಬೃಹತ್‌ ಹೂವಿನ ಹಾರ ಹಾಕಿ ಸನ್ಮಾನಿಸಿದರು.
ಕೋಲಾರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಮುಖಂಡರು ಬೃಹತ್‌ ಹೂವಿನ ಹಾರ ಹಾಕಿ ಸನ್ಮಾನಿಸಿದರು.   

ಕೋಲಾರ: ‘ಜಿಲ್ಲೆಯ ಜನರ ಒತ್ತಾಯದಂತೆ ಕೆ.ಸಿ ವ್ಯಾಲಿ ಯೋಜನೆ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಲು ನಿರ್ಧರಿಸಿದ್ದೇವೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಇಲ್ಲಿ ಶನಿವಾರ ನಡೆದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಕೆ.ಸಿ ವ್ಯಾಲಿ ಯೋಜನೆಯ ತಡೆಯಾಜ್ಞೆ ತೆರವಿಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸಿದ್ದು, ಜಿಲ್ಲೆಗೆ ನೀರು ಹರಿದು ಬರುತ್ತಿರುವ ಯೋಜನೆಯ ನೀರನ್ನು 3ನೇ ಹಂತದಲ್ಲಿ ಸಂಸ್ಕರಿಸುವ ಬಗ್ಗೆ ತಜ್ಞರೊಂದಿಗೆ ಚರ್ಚಿಸಿದ್ದೇವೆ’ ಎಂದರು.

‘ರೈತರ ಸಾಲ ಮನ್ನಾ ವಿಚಾರದಲ್ಲಿ ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಮತದಾರರನ್ನು ಸೆಳೆಯಲು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿರುವಂತೆ ಕೃಷಿ ಸಾಲ ಮನ್ನಾ ಮಾಡಲಾಗಿದೆ. ಮೇಕೆದಾಟು ಯೋಜನೆ ಮೂಲಕ ಜಿಲ್ಲೆಗೆ ಕುಡಿಯುವ ನೀರು ಕೊಡಲು ಯೋಜನೆ ರೂಪಿಸಿದ್ದು, 2 ವರ್ಷದಲ್ಲಿ ಪೂರ್ಣಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯಬೇಕಾದರೆ ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಭಿನ್ನಾಭಿಪ್ರಾಯ ಮರೆತು ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಮಾಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್‌ನ ಕೆಲ ಮುಖಂಡರು ಮುನಿಯಪ್ಪ ವಿರುದ್ಧ ಕೆಲಸ ಮಾಡಲು ಮುಂದಾಗಿದ್ದಾರೆ. ಕಾರ್ಯಕರ್ತರು ಅವರ ಮಾತಿಗೆ ಮರುಳಾಗದೆ ಮುನಿಯಪ್ಪರನ್ನು ಕುಟುಂಬದ ಸದಸ್ಯರೆಂದು ಭಾವಿಸಿ ಗೆಲ್ಲಿಸಬೇಕು’ ಎಂದು ಕೋರಿದರು.

ಮಹಾನ್‌ ಸುಳ್ಳುಗಾರ: ‘ಪ್ರಧಾನಿ ಮೋದಿ ಮಹಾನ್‌ ಸುಳ್ಳುಗಾರ. ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ದೇಶದಲ್ಲಿ ಮಾಫಿಯಾ ರಾಜಕೀಯ ನಡೆಸುತ್ತಿದ್ದಾರೆ. ಈ ಇಬ್ಬರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಜಕೀಯ ಕಲುಷಿತಗೊಳಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ವಾಗ್ದಾಳಿ ನಡೆಸಿದರು.

‘ಬಿಜೆಪಿ ಮುಖಂಡರು ವಿಪಕ್ಷಗಳನ್ನು ಎದುರಿಸಲಾಗದೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ಮಾಡಿಸುತ್ತಿದ್ದಾರೆ. ಸೇನೆಯ ಸಾಧನೆಯನ್ನು ರಾಜಕೀಯ ಬಳಸಿಕೊಳ್ಳುತ್ತಿರುವ ಬಿಜೆಪಿಗೆ ಜನರ ಬಳಿ ಹೋಗಿ ಮತ ಕೇಳುವ ನೈತಿಕತೆಯಿಲ್ಲ’ ಎಂದು ಕಿಡಿಕಾರಿದರು.

ಮರಳಾಗುವುದಿಲ್ಲ: ‘ಮೋದಿ ಹಲವು ದಿನಗಳಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಆದರೆ, ಎಲ್ಲಿಯೂ ಅವರು ಕೇಂದ್ರದ ಅಭಿವೃದ್ಧಿ ಕೆಲಸಗಳನ್ನು ಪ್ರಸ್ತಾಪಿಸಿಲ್ಲ. ಪ್ರಚೋದನಾಕಾರಿ ಭಾಷಣದ ಮೂಲಕವೇ ಜನರನ್ನು ಯಾಮಾರಿಸಿ ಚುನಾವಣೆಯಲ್ಲಿ ಗೆಲ್ಲುವ ಕನಸು ಕಾಣುತ್ತಿದ್ದಾರೆ. ರಾಜಕೀಯ ಬದಲಾವಣೆ ಬಯಸಿರುವ ಜನ ಮೋದಿಯವರ ಬಣ್ಣದ ಮಾತಿಗೆ ಮರಳಾಗುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.