ವಿಜಯಪುರ:‘ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮೇಲೆ ಪತ್ರಕರ್ತರ ಸಮಕ್ಷಮವೇ ಹಲ್ಲೆ ಯತ್ನ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕಿದೆ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಆಗ್ರಹಿಸಿದರು.
‘ಆಡಳಿತಾರೂಢರ ಹತಾಶೆಯ ಮನಸ್ಥಿತಿಯಿದು. ಟೀಕಿಸುವುದು ವಿರೋಧ ಪಕ್ಷದವರ ಹಕ್ಕು. ಸೂಕ್ತ ಉತ್ತರ ನೀಡುವುದನ್ನು ಬಿಟ್ಟು ಹಲ್ಲೆಗೆ ಮುಂದಾಗಿದ್ದು, ಪ್ರಜಾಪ್ರಭುತ್ವ, ಸಂವಿಧಾನದ ಆಶಯದ ಮೇಲೆ ನಡೆಸಿದ ದಾಳಿ’ ಎಂದು ಭಾನುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಚುನಾವಣೆ ಸಮಯದಲ್ಲಿ ರಾಜ್ಯದ ಆಡಳಿತಗಾರರಿಂದ ಭಯ ಹುಟ್ಟಿಸುವ ಕೆಲಸ ನಡೆದಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ವರದಿ ಪಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು’ ಎಂದು ಶಹಾಪುರ ಆಗ್ರಹಿಸಿದರು.
‘ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಯೇ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ ಹೆಸರಿನಲ್ಲಿ ಬೆಂಬಲಿಗರು ದಾಂದಲೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ರಾಜ್ಯಪಾಲರು ಗಂಭೀರವಾಗಿ ಆಲೋಚಿಸಬೇಕಿದೆ’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.