ADVERTISEMENT

ಮೈಸೂರು: ಮೋದಿ ಸಮಾವೇಶಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 10:57 IST
Last Updated 9 ಏಪ್ರಿಲ್ 2019, 10:57 IST
ಮೈಸೂರಿನಲ್ಲಿ ನಡೆಯುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಜನ ಸೇರುತ್ತಿದ್ದಾರೆ.
ಮೈಸೂರಿನಲ್ಲಿ ನಡೆಯುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಜನ ಸೇರುತ್ತಿದ್ದಾರೆ.   

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ನಡೆಯಲಿದ್ದು, ಕ್ಷಣಗಣನೆ ಶುರುವಾಗಿದೆ.

ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಮೈದಾನದಲ್ಲಿ ನೆರೆದಿದ್ದು, ಪ್ರಧಾನಿ ಬರುವಿಕೆಗೆ ಕಾಯುತ್ತಿದ್ದಾರೆ. ಮಧ್ಯಾಹ್ನದಿಂದಲೇ ವಿವಿಧ ಕಡೆಗಳಿಂದ ಕಾರ್ಯಕರ್ತರು ಸಮ್ಮೇಳನ ತಾಣದತ್ತ ಹರಿದುಬರತೊಡಗಿದ್ದಾರೆ.

ಈ ಸಮಾವೇಶದ ಮೂಲಕ ಮೈಸೂರು ಭಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ಮೋದಿ ಅವರು ಮೈಸೂರು–ಕೊಡಗು ಕ್ಷೇತ್ರದ ಅಭ್ಯರ್ಥಿ ಪ್ರತಾಪ ಸಿಂಹ ಮತ್ತು ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್‌ ಪರ ಮತಯಾಚಿಸಲಿದ್ದಾರೆ.

ADVERTISEMENT

ಚಿತ್ರದುರ್ಗದಲ್ಲಿ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡಿರುವ ಮೋದಿ ಅವರು ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದು, ಅಲ್ಲಿಂದ ಸಮ್ಮೇಳನದ ತಾಣಕ್ಕೆ ಬರಲಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒಳಗೊಂಡಂತೆ ಪಕ್ಷದ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಅವರು ಪ್ರಧಾನಿಯಾದ ಬಳಿಕ ಮೈಸೂರಿಗೆ ನೀಡಲಿರುವ ಮೂರನೇ ಭೇಟಿ ಇದು. 2016ರ ಜನವರಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದಿದ್ದ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿಧಾನಸಭೆ ಚುನಾವಣೆಗೂ ಮುನ್ನ 2018ರ ಫೆಬ್ರುವರಿಯಲ್ಲಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.