ADVERTISEMENT

ಪ್ರಮೋದ್‌, ತಿಪ್ಪರಾಜು ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2018, 20:01 IST
Last Updated 8 ಏಪ್ರಿಲ್ 2018, 20:01 IST

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ವಿರುದ್ಧ ಶನಿವಾರ ಎಫ್‍ಐಆರ್ ದಾಖಲಾಗಿದೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಪುರುಷರ ವೇಟ್‌ಲಿಫ್ಟಿಂಗ್‌ನ 56 ಕೆ.ಜಿ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರ ಸಮೀಪದ ಗುರುರಾಜ್‌ ಪೂಜಾರಿ ಅವರಿಗೆ, ಕ್ರೀಡಾ ನೀತಿಯ ಅನ್ವಯ ₹ 15 ಲಕ್ಷ ನಗದು ಹಾಗೂ ಸರ್ಕಾರಿ ‘ಬಿ‘ ಗ್ರೂಪ್‌ ಹುದ್ದೆ ಸಿಗಲಿದೆ ಎಂದು ಅವರು ಹೇಳಿಕೆ ನೀಡಿದ್ದರು.

ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆಯಿಂದ ಮತದಾರರನ್ನು ಓಲೈಸಿದಂತಾಗುತ್ತದೆ, ಆಮಿಷ ಒಡ್ಡಿದಂತಾಗುತ್ತದೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ಉಡುಪಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.

ADVERTISEMENT

ರಾಯಚೂರು: ಜನರಿಗೆ ಭರವಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ತಿಪ್ಪರಾಜು ಹವಾಲ್ದಾರ್‌ ಅವರ ವಿರುದ್ಧ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಚುನಾವಣಾಧಿಕಾರಿ ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಲಿಕಲ್ಲು ಮಳೆಯಿಂದ ಭತ್ತದ ಬೆಳೆ ನಷ್ಟವಾಗಿದ್ದು, ಅದನ್ನು ವೀಕ್ಷಿಸುವುದಕ್ಕೆ ತಾಲ್ಲೂಕಿನ ಸಿಂಗನೋಡಿ ಗ್ರಾಮಕ್ಕೆ ಶಾಸಕರು ಹೋಗಿದ್ದರು. ಆಗ ಅವರು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು. ಆನಂತರ ಖುದ್ದಾಗಿ ಪರಿಹಾರ ನೀಡುವುದಾಗಿಯೂ ಹೇಳಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.

ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಎಫ್‌ಐಆರ್‌

ಮಂಗಳೂರು: ಗೋವು ಕಳ್ಳರ ಬಂಧನಕ್ಕೆ ಆಗ್ರಹಿಸಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕೈರಂಗಳದಲ್ಲಿ ಇದೇ 4ರಂದು ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಅವರ ವಿರುದ್ಧ ಪೊಲೀಸರು ಭಾನುವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪ್ರಭಾಕರ ಭಟ್‌, ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸುವುದಕ್ಕೆ ಪೂರಕವಾಗಿ ಮಾತನಾಡಿದ್ದರು ಎಂದು ಆರೋಪಿಸಿ, ಕಾಂಗ್ರೆಸ್‌ ಮುಖಂಡರು ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಭಟ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು) ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 125 (ನೀತಿಸಂಹಿತೆ ಉಲ್ಲಂಘನೆ) ಆರೋಪದಡಿ ಕೊಣಾಜೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಚುನಾವಣಾ ಆಯೋಗದ ಅನುಮತಿ ಪಡೆಯದೇ ಸಭೆ ನಡೆಸಲಾಗಿದೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ಭಾಷಣ ಮಾಡುವ ಮೂಲಕ  ಆಯೋಗ ಹಾಗೂ ಚುನಾವಣಾ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅನುಮಾನ ಹುಟ್ಟಿಸುವ ರೀತಿಯಲ್ಲಿ ಆರೋಪಿ ನಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.