ADVERTISEMENT

ಬಳ್ಳಾರಿ ಭೇಟಿ: ರೆಡ್ಡಿ ಮನವಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 4 ಮೇ 2018, 19:30 IST
Last Updated 4 ಮೇ 2018, 19:30 IST

ನವದೆಹಲಿ: ಮೇ 12ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಲುವಾಗಿ ಬಳ್ಳಾರಿ ಭೇಟಿಗೆ ಅನುಮತಿ ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಳ್ಳಿಹಾಕಿದೆ.

‘ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಸೋದರ ಸೋಮಶೇಖರ ರೆಡ್ಡಿ ಪರ ಪ್ರಚಾರದಲ್ಲಿ ತೊಡಗಬೇಕಿದ್ದು, ಜಾಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತನ್ನು ಸಡಿಲಿಸಿ’ ಎಂದು ಕೋರಿ ರೆಡ್ಡಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಹಾಗೂ ಅಶೋಕ್‌ ಭೂಷಣ್‌ ಅವರಿದ್ದ ಪೀಠ ನಡೆಸಿತು.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ 2011ರ ಸೆಪ್ಟೆಂಬರ್‌ 5ರಂದು ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ರೆಡ್ಡಿ ಅವರಿಗೆ ಬಳ್ಳಾರಿ, ಆಂಧ್ರ ಪ್ರದೇಶದ ಅನಂತಪುರ ಮತ್ತು ಕಡಪ ಜಿಲ್ಲೆಗಳನ್ನು ಪ್ರವೇಶಿಸುವಂತಿಲ್ಲ ಎಂಬ ಷರತ್ತಿನಡಿ, 2015ರ ಜನವರಿ 21ರಂದು ಸುಪ್ರೀಂ ಕೋರ್ಟ್‌ ಜಾಮೀನು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.