ADVERTISEMENT

ಶೋಭಾ, ಗದ್ದಿಗೌಡರ್ ಸ್ಪರ್ಧೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 19:30 IST
Last Updated 17 ಏಪ್ರಿಲ್ 2018, 19:30 IST
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)   

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಶತಾಯ– ಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ, ಇನ್ನಿಬ್ಬರು ಸಂಸದರಿಗೆ ಟಿಕೆಟ್‌ ನೀಡುವ ಕುರಿತು ಚಿಂತನೆ ನಡೆಸಿದೆ.

ಚಿಕ್ಕಮಗಳೂರು– ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯಶವಂತಪುರ ಕ್ಷೇತ್ರದಿಂದ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಭಾನುವಾರ ನಡೆದಿದ್ದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿತ್ತು. ಸಭೆ ನಡೆಯುತ್ತಿದ್ದಾಗಲೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿ, ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಲಿದ್ದಾರೆ ಎಂಬುದು ಖಚಿತವಾಗಿತ್ತು. ಹೀಗಾಗಿ, ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.

ADVERTISEMENT

ಲಿಂಗಾಯತ ಸಮುದಾಯದ ಮತಗಳು ಅಧಿಕ ಸಂಖ್ಯೆಯಲ್ಲಿರುವ ಬಾದಾಮಿ ಕ್ಷೇತ್ರದಲ್ಲಿ ಗಾಣಿಗ ಸಮುದಾಯದ ಗದ್ದಿಗೌಡರ್‌ ಅವರಿಗೆ ಟಿಕೆಟ್‌ ನೀಡಿದರೆ ಗೆಲ್ಲಬಹುದು ಎಂದು ರಾಜ್ಯ ಮುಖಂಡರೂ ಸಲಹೆ ನೀಡಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರ ಸಂಖ್ಯೆ ಅಧಿಕ ಪ್ರಮಾಣದಲ್ಲಿ ಇರುವುದರಿಂದ ಶೋಭಾ ಕರಂದ್ಲಾಜೆ ಅವರನ್ನೇ ಕಣಕ್ಕಿಳಿಸಿದರೆ ಗೆಲ್ಲುವ ಸಾಧ್ಯತೆ ಅಧಿಕವಾಗಿದೆ ಎಂದು ರಾಜ್ಯ ಮುಖಂಡರು ತಿಳಿಸಿರುವುದರಿಂದ ಅವರಿಗೇ ಟಿಕೆಟ್‌ ನೀಡಬಹುದು ಎಂದು ಹೇಳಲಾಗುತ್ತಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬುಧವಾರ ಬೆಂಗಳೂರಿನಲ್ಲಿ, ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಹ ಉಸ್ತುವಾರಿ ಪೀಯೂಷ್ ಗೋಯಲ್, ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಹಾಗೂ ರಾಜ್ಯ ಪ್ರಮುಖರ ಜತೆ ಚರ್ಚಿಸಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಇನ್ನೂ 70 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಬೇಕಾಗಿದೆ. 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಶಾ ಆಖೈರುಗೊಳಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.