ADVERTISEMENT

ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಿಗದ ಪ್ರಾತಿನಿಧ್ಯ: ರಾಹುಲ್‌ ಭೇಟಿಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ   

ಬೆಂಗಳೂರು: ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ (ಎಡಗೈ ಬಣ) ಕಾಂಗ್ರೆಸ್‌ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೀಘ್ರವೇ ನಿಯೋಗದ ಮೂಲಕ ತೆರಳಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ, ಮಾದಿಗ ಸಮುದಾಯಕ್ಕೆ ಸಂಪುಟದಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಲು ಮುಖಂಡರು ತೀರ್ಮಾನಿಸಿದ್ದಾರೆ.

ಮಾಜಿ ಸಚಿವ ಎಚ್‌. ಆಂಜನೇಯ ಅವರ ನಿವಾಸದಲ್ಲಿ ಗುರುವಾರ ಸಂಜೆ ಸಭೆ ಸೇರಿದ ಸಮುದಾಯದ ಮುಖಂಡರು, ಈ ಬಗ್ಗೆ ನಿರ್ಣಯ ಕೈಗೊಂಡಿದ್ದಾರೆ.

ADVERTISEMENT

ಬಳಿಕ ಮಾತನಾಡಿದ ಆಂಜನೇಯ, ‘ರಾಜ್ಯದಲ್ಲಿ ನಮ್ಮ ಸಮುದಾಯದ ಜನರು ಶೇ 7ರಷ್ಟಿದ್ದಾರೆ. ವಿಧಾನಸಭೆಗೆ ಕೆಜಿಎಫ್‌ ಕ್ಷೇತ್ರದಿಂದ ರೂಪ ಶಶಿಧರ್‌ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಧರ್ಮಸೇನ ಮತ್ತು ಆರ್‌.ಬಿ. ತಿಮ್ಮಾಪೂರ ಸದಸ್ಯರಾಗಿದ್ದಾರೆ. ಈ ಪೈಕಿ ಸಂಪುಟಕ್ಕೆ ಯಾರನ್ನೂ ಪರಿಗಣಿಸದಿರುವುದು ಸಮುದಾಯಕ್ಕೆ ಮಾಡಿದ ಅನ್ಯಾಯ’ ಎಂದರು.

ಸಂಸದ ಬಿ.ಎನ್. ಚಂದ್ರಪ್ಪ, ರಾಜ್ಯಸಭೆ ಸದಸ್ಯ ಎಲ್‌. ಹನುಮಂತಯ್ಯ, ಮಾಜಿ ಸಂಸದ ಕೆ.ಬಿ. ಕೃಷ್ಣಮೂರ್ತಿ, ಧರ್ಮಸೇನ, ಹೈಕೋರ್ಟ್‌ ವಕೀಲ ವೆಂಕಟೇಶ್‌ ಎಚ್‌. ದೊಡ್ಡೇರಿ ಮತ್ತು ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್‌ ಅಭ್ಯರ್ಥಿಗಳು ಸಭೆಯಲ್ಲಿದ್ದರು.

ಅದಕ್ಕೂ ಮೊದಲು ಸಂಸದ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಸಮುದಾಯದ ನಾಯಕರು ಸಭೆ ಸೇರಿದ್ದರು. ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಈ ಸಭೆಯಲ್ಲೂ ತೀರ್ಮಾನಿಸಲಾಗಿತ್ತು ಎಂದು ಗೊತ್ತಾಗಿದೆ.
*
‘ಮಾದಿಗರಿಗೆ ಸಚಿವ ಸ್ಥಾನ ನೀಡಿ’ 
ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾಗಿರುವ ಮಾದಿಗರಿಗೆ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಮಾದಿಗ ಸಮುದಾಯದ ನಾಯಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಇದು ಸಮುದಾಯದಲ್ಲಿ ತೀವ್ರ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದ್ದು, ನಮಗೂ ನೋವಾಗಿದೆ. ಸಾಮಾಜಿಕ ನ್ಯಾಯದ ಪರವಾಗಿರುವುದಾಗಿ ಹೇಳಿಕೊಳ್ಳುವ ಕಾಂಗ್ರೆಸ್‌, ಮಾದಿಗ ಸಮುದಾಯದ ಹಿತ ಕಾಪಾಡಬೇಕು’ ಎಂದರು.

‘ಮೊದಲಿನಿಂದಲೂ ಮಾದಿಗರು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಮಾದಿಗರನ್ನು ಕಾಂಗ್ರೆಸ್‌ ನಿರ್ಲಕ್ಷ್ಯ ಮಾಡಿದೆ ಎಂಬುದು ಅರ್ಥವಾಗುತ್ತಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗರಿಗೆ ಸಚಿವ ಸ್ಥಾನ ನೀಡಬೇಕು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸಾಮಾಜಿಕ ನ್ಯಾಯದ ಪರವಾಗಿ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.