ADVERTISEMENT

ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ:ಶಾಸಕ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 13 ಜೂನ್ 2018, 19:30 IST
Last Updated 13 ಜೂನ್ 2018, 19:30 IST

ಚಿಕ್ಕಬಳ್ಳಾಪುರ: ‘ಕಾಂಗ್ರೆಸ್‌ ನಾಯಕರು ಇನ್ನಾದರೂ ಆತ್ಮ ವಿಮರ್ಶೆ ಮಾಡಿಕೊಂಡು ಪಕ್ಷದ ಯುವ ನಾಯಕರಿಗೆ ಸ್ಥಾನಮಾನ ನೀಡಬೇಕು. ಆಗಲೇ ಪಕ್ಷಕ್ಕೆ ಗೌರವ. ಇಲ್ಲವಾದರೆ ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಬುಧವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿದ್ದವರು ತಮ್ಮ ಮಗನಿಗೆ ಮಂತ್ರಿ ಮಾಡುವುದು ದೊಡ್ಡತನವಲ್ಲ. ಸಚಿವ ಸ್ಥಾನ ತಂದೆ, ತಾತನ ಸ್ಥಾನಮಾನ ನೋಡಿ ಕೊಡುವುದಲ್ಲ. ಯುವ ನಾಯಕರ ಸಾಮರ್ಥ್ಯ, ಸೇವಾ ಮನೋಭಾವ ನೋಡಿ ಕೊಡಬೇಕು’ ಎಂದು ಅಭಿಪ್ರಾಯಪಟ್ಟರು.

‘ಪಂಜಾಬ್‌ ಬಿಟ್ಟು ದೇಶದಲ್ಲಿ ಬೇರೆ ಎಲ್ಲೆಡೆ ಕೇಸರಿಮಯವಾಗುತ್ತಿದೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುತ್ತಿರುವುದೇ ಇದಕ್ಕೆ ಕಾರಣ. ಆದರೆ ಕಾಂಗ್ರೆಸ್‌ ಪಕ್ಷ ಯುವಜನರನ್ನು ನಿರ್ಲಕ್ಷಿಸಿದ್ದರಿಂದ ಇವತ್ತು ಹೀನಾಯ ಸ್ಥಿತಿ ತಲುಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸ್ಥಿತಿ ಏನಾಗಬಹುದು ಎಂದು ಹಿರಿಯ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಅರ್ಹತೆಗೆ ಅನುಗುಣವಾಗಿ ಸಚಿವರಾಗಿರುವವರ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷ ಪ್ರಬಲವಾಗಿ ಬೆಳೆಯಬೇಕಾದರೆ ಯುವ ನಾಯಕರ ಪಾತ್ರ ಹೆಚ್ಚಾಗಿದೆ. ಕಾಂಗ್ರೆಸ್‌ ಇದನ್ನು ಗಂಭೀರವಾಗಿ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಎಚ್ಚರಿಕೆ ನೀಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಡಾ. ಸುಧಾಕರ್, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸದ್ಯ ಕಾಂಗ್ರೆಸ್ ಅತೃಪ್ತರ ಗುಂಪಿನೊಂದಿಗೆ ಗುರುತಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.